ಸಿದ್ದಾಪುರ, ಫೆ. ೨೭: ಬಾಡಗ ಬಾಣಂಗಾಲ ಗ್ರಾಮದ ಮಠ ಎಂಬಲ್ಲಿ ಕಾಫಿ ತೋಟದಲ್ಲಿ ಹುಲಿಯೊಂದು ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬಾಡಗ ಬಾಣಂಗಾಲ ಗ್ರಾಮದ ಮಠ ಎಂಬಲ್ಲಿ ಪ್ರವೀಣ ಎಂಬವರಿಗೆ ಸೇರಿದ ಗಬ್ಬದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಹತ್ಯೆ ಮಾಡಿತ್ತು. ಇದೀಗ ಮಠ ಸಮೀಪದ ಕಾಫಿ ತೋಟವೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ಸ್ಥಳೀಯ ನಿವಾಸಿ ಮಜೀದ್ ಎಂಬವರು ಹುಲಿಯನ್ನು ಕಂಡಿದ್ದಾರೆ. ಬಳಿಕ ಆತಂಕಕೊAಡು ವಾಹನವೊಂದರಲ್ಲಿ ಸ್ಥಳದಿಂದ ತೆರಳಿದರು ಎನ್ನಲಾಗಿದೆ. ಕೂಡಲೇ ಹುಲಿಯ ಚಲನವಲನವನ್ನು ಕಂಡುಹಿಡಿದು ಅದನ್ನು ಸೆರೆ ಹಿಡಿಯಬೇಕೆಂದು ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಹಸುವಿನ ಮೇಲೆ ದಾಳಿ ನಡೆಸಿದ ಹುಲಿಯ ಚಲನವಲನವನ್ನು ಕಂಡುಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಮೀಪದ ಕಾಫಿ ತೋಟಗಳಲ್ಲಿ ಸುತ್ತಾಡುತ್ತಿದ್ದಾರೆ. ಆದರೆ ಹುಲಿಯು ಅರಣ್ಯ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ಕಾಫಿ ತೋಟಗಳಲ್ಲಿ ಸುತ್ತಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.