ಕುಶಾಲನಗರ, ಮಾ. ೭: ಸೋಮವಾರಪೇಟೆ ತಾಲೂಕು ಶನಿವಾರಸಂತೆಯಲ್ಲಿ ಸದ್ಯದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಗೊಳ್ಳಲಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರ ಸಮೀಪ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ಬಸ್ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ಮಾತನಾಡಿ ಅವಕಾಶಗಳನ್ನು ಬಳಸಿ ಸಮರ್ಪಕವಾಗಿ ನಿರ್ವಹಿಸಬೇಕು. ಪರಿಸರ ಕಾಪಾಡುವ ಜೊತೆಗೆ ಅಭಿವೃದ್ಧಿ ಕೆಲಸ ನಿರಂತರ ನಡೆಯಬೇಕು ಎಂದು ಹೇಳಿದರು.

ಬಸವನಹಳ್ಳಿ ಬಳಿ ಹೆದ್ದಾರಿ ಒತ್ತಿನಲ್ಲಿ ಸರ್ಕಾರಿ ವ್ಯವಸ್ಥೆಗೆ ಜಾಗ ಕಾದಿರಿಸಿರುವ ಸ್ಥಳೀಯ ಪ್ರಮುಖರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಸ್ ಘಟಕ ಮುಂದಿನ ಒಂದು ವರ್ಷದ ಒಳಗೆ ಲೋಕಾರ್ಪಣೆಗೊಳ್ಳಲಿದೆ.

ಇದೇ ಸಂದರ್ಭ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ವಿಭಾಗಿಯ ಕಚೇರಿ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸುಮಾರು ೩೫ ಲಕ್ಷ ಅನುದಾನ ಕಲ್ಪಿಸಲಾಗಿದೆ. ಗ್ರಾಮದಲ್ಲಿ ಅಭಿವೃದ್ಧಿ ಜನ ಪರ ಕೆಲಸ ಮಾಡುವ ಬಗ್ಗೆ ಮಾಹಿತಿ ನೀಡಿದರು.

(ಮೊದಲ ಪುಟದಿಂದ) ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ಮೂಲಕ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಶಾಸಕರ ಶ್ರಮದ ಫಲವಾಗಿ ಹಲವು ವರ್ಷಗಳ ಕನಸು ನನಸಾಗಿದೆ. ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಪರಿಸರ ಉಳಿಸುವ ಮೂಲಕ ಪೂರಕವಾಗಿ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.

ವಕೀಲ ಆರ್.ಕೆ. ನಾಗೇಂದ್ರ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಸಾರಿಗೆ ಸಂಸ್ಥೆಯ ವಿಭಾಗ ಕಚೇರಿ ತೆರೆಯುವುದು, ಸಾರಿಗೆ ಅತಿಥಿಗೃಹ ನಿರ್ಮಾಣ ಮತ್ತಿತರ ವಿಷಯಗಳ ಬಗ್ಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂಜಿನಿಯರ್ ಶರತ್ ಕಾಮಗಾರಿಯ ಬಗ್ಗೆ ಮಾಹಿತಿ ನೀಡಿ ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಮುಂದಿನ ಆರ್ಥಿಕ ವರ್ಷದ ಒಳಗೆ ಲೋಕಾರ್ಪಣೆಗೆ ಸಿದ್ಧತೆ ನಡೆಸಲಾಗುವುದು. ಘಟಕದಲ್ಲಿ ಮುಖ್ಯ ಕಟ್ಟಡ, ಸಿಬ್ಬಂದಿಗಳ ವಿಶ್ರಾಂತಿ ಕೊಠಡಿಗಳು, ಭದ್ರತಾ ಕೊಠಡಿ ಮತ್ತಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಸೂಕ್ತವಾದ ಜಾಗ ಗುರುತಿಸಿ ಶ್ರಮಿಸಿದ ಪ್ರಮುಖರಾದ ಆರ್.ಕೆ. ನಾಗೇಂದ್ರ ಬಾಬು,, ಕೆ.ಪಿ. ಚಂದ್ರಕಲಾ ಹಾಗೂ ಎಸ್.ಎನ್. ನರಸಿಂಹಮೂರ್ತಿ ಅವರ ಕುಟುಂಬ ಸದಸ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಾದಪ್ಪ, ಸದಸ್ಯರು, ಸಾರಿಗೆ ಸಂಸ್ಥೆ ಅಧಿಕಾರಿ ಎಂ.ಎA. ಮೆಹಬೂಬ್, ಪ್ರಮುಖರಾದ ಬಿ.ಎಸ್. ಚಂದ್ರಶೇಖರ್, ಮಂಜುನಾಥ್ ಗುಂಡೂರಾವ್ , ನಟೇಶ್ ಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್. ಸುರೇಶ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಮತ್ತಿತರರು ಇದ್ದರು.