ಸೋಮವಾರಪೇಟೆ, ಮಾ. ೯: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ತಾಲೂಕು ಘಟಕದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಮೊಗೇರ ಕಪ್-ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ¥ಂದ್ಯಾಟಕ್ಕೆ ಚಾಲನೆ ದೊರೆತಿದ್ದು, ತಾ. ೧೦ರಂದು (ಇಂದು) ಫೈನಲ್ ಪಂದ್ಯಾಟ ನಡೆಯಲಿದೆ. ಜಿಲ್ಲಾ ಘಟಕದ ಅಧ್ಯಕ್ಷ ಜನಾರ್ಧನ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಸಮಾಜ ಬಲಿಷ್ಠವಾದರೂ, ಆರ್ಥಿಕವಾಗಿ ಹಿಂದೆ ಉಳಿದಿದೆ. ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸಮಾಜದ ಹಿತ ಕಾಯುವ ಕೆಲಸ ಮಾಡಬೇಕೆಂದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಭಾಸ್ಕರ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಕ್ರೀಡಾಧ್ಯಕ್ಷ ಕುಶಾಲಪ್ಪ ವಹಿಸಿದ್ದರು. ವೇದಿಕೆಯಲ್ಲಿ ಮೊಗೇರ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಪಿ.ಕೆ. ವಸಂತ, ರಾಜ್ಯ ಸಮಿತಿ ಉಪಾಧ್ಯಕ್ಷ ಬಿ. ಶಿವಪ್ಪ, ರಾಜ್ಯ ಸಮಿತಿ ಸದಸ್ಯ ಪಿ.ಕೆ. ಚಂದ್ರು, ಜಿಲ್ಲಾ ಸಮಿತಿ ಉಪಾಧ್ಯಕ್ಷ ಬಿ.ಎಂ. ದಾಮೋದರ್, ಪ್ರಧಾನ ಕಾರ್ಯದರ್ಶಿ ಹರೀಶ, ಉಪ ತಹಶೀಲ್ದಾರ್ ತುಕ್ರಪ್ಪ, ಮತ್ತಿತರರು ಇದ್ದರು.