ಮಡಿಕೇರಿ, ಮಾ. ೧೦: ಬಿಜೆಪಿಯ ಮಡಿಕೇರಿ ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪದಗ್ರಹಣ ಸಮಾರಂಭ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮೋರ್ಚಾದ ಅಧ್ಯಕ್ಷ ಬಿ.ಎಂ. ಪ್ರತೀಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಸಿಕ್ಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಉನ್ನತ ಸ್ಥಾನಮಾನಗಳು ಅರಸಿ ಬರುತ್ತವೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ ಮಾತನಾಡಿ, ಬಿಜೆಪಿಗೆ ಕಾರ್ಯಕರ್ತರೆ ಬಲವಾಗಿದ್ದು, ಪಕ್ಷ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಮಾತನಾಡಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಆಶ್ರಯದಲ್ಲಿ ತಾ. ೧೫ರಂದು ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನಿಸಿದ್ದು, ಬಿಜೆಪಿಯ ಎಲ್ಲಾ ಘಟಕಗಳು ಈ ಸಮಾವೇಶದಲ್ಲಿ ಭಾಗವಹಿಸುವಂತಾಗಬೇಕು ಎಂದರು. ಪ್ರತೀಪ ಮಾತನಾಡಿ, ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಸಮಾವೇಶ ನಡೆಯಲಿದ್ದು, ಹಿಂದುಳಿದ ವರ್ಗದವರನ್ನು ಮುನ್ನಲೆಗೆ ತರುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಕಾರ್ಯದರ್ಶಿಗಳಾದ ಉಮಾಪ್ರಭು, ಕನ್ನಿಕೆ, ಉಪಾಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು. ಕಾಶೀ ಕಾವೇರಪ್ಪ ಪ್ರಾರ್ಥಿಸಿ, ಬಿಜೆಪಿ ಹಿಂದುಳಿದ ವರ್ಗಗಳ ಮಡಿಕೇರಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಆನಂದ ನಿರೂಪಿಸಿ, ಉಮಾಪ್ರಭು ಸ್ವಾಗತಿಸಿ, ಕಾರ್ಯದರ್ಶಿ ಚೋಕಿರ ಭೀಮಯ್ಯ ವಂದಿಸಿದರು.