ಗೋಣಿಕೊಪ್ಪಲು, ಮಾ. ೧೨: ಲೈನ್ ಮನೆಯಲ್ಲಿ ವಾಸವಿರುವ ಆದಿವಾಸಿಗಳಿಗೆ ಎರಡು ತಿಂಗಳೊಳಗೆ ನಿವೇಶನ ಮಂಜೂರು ಮಾಡಬೇಕು. ಸರ್ಕಾರಿ ಕಚೇರಿಗೆ ತೆರಳುವ ದಲಿತರಿಗೆ ಅಧಿಕಾರಿಗಳು ಗೌರವ ನೀಡಬೇಕು. ತಾಲೂಕು ಪಂಚಾಯಿತಿ ಇಒ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹೆಸರಿನಲ್ಲಿರುವ ಸರ್ಕಾರಿ ಭೂಮಿಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಪೊನ್ನಂಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿಯವರ ಕಚೇರಿಯ ಮುಂದೆ ಆಲ್ ಇಂಡಿಯಾ ದಲಿತ್ ರೈಟ್ಸ್ ಮೂವ್ಮೆಂಟ್ ರಾಜ್ಯ ಸಂಚಾಲಕ ರಮೇಶ್ ಮಾಯಮುಡಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಮೇಶ್, ಕಳೆದ ೧೮ ವರ್ಷಗಳಿಂದ ನಮ್ಮ ಸಂಘಟನೆ ನಿರಂತರ ಹೋರಾಟ ಗಳನ್ನು ನಡೆಸಿ ಸರ್ಕಾರದ ಗಮನಕ್ಕೆ ತಂದರೂ ಈ ಬಗ್ಗೆ ಇಲಾಖಾಧಿ ಕಾರಿಗಳು ಹಾಗೂ ಸರ್ಕಾರ ಆದಿವಾಸಿಗಳಿಗೆ ನಿವೇಶನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಲೇ ಬಂದಿದೆ. ಇದರಿಂದ ಪ್ರತಿಭಟನೆ ನಡೆಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಎಂದರು.
ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ.ಸಿ. ಅಪ್ಪಣ್ಣ, ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿಗಳಿಗೆ ನಿವೇಶ ನೀಡಲು ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಹಂತಹAತವಾಗಿ ನಿವೇಶನ ಮಂಜೂರು ಮಾಡಲು ಕ್ರಮ ವಹಿಸಲಾಗುವುದು ಎಂದರು. ತಾಲೂಕು ಪಂಚಾಯಿತಿ ಅಧಿಕಾರಿಗಳಾದ ಅಸ್ಲಮ್ ಪಾಷ, ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಜೆ.ಎಂ. ಅಶೋಕ್, ಪಿ.ಕೆ. ಗೌರಿ, ಪಿ.ಬಿ. ಕರ್ಕು ಜೆ.ಟಿ. ತಿಮ್ಮ ಬಿ. ರಾಣಿ ಹಾಗೂ ಸೀತೆ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಭಾಗದಿಂದ ಲೈನ್ ಮನೆಯಲ್ಲಿ ವಾಸವಿರುವ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.