ಹೊಸದಿಲ್ಲಿ, ಮಾ. ೧೩: ೨೦೨೪ರ ಲೋಕಸಭಾ ಚುನಾವಣೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ೧೯೫ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ಸಭೆ ನಡೆಸಿ, ಇದೀಗ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದ ಕ್ಷೇತ್ರಗಳಲ್ಲಿ ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯದ ಮೇರೆಗೆ ೧೯೫ ಅಭ್ಯರ್ಥಿಗಳನ್ನ ಘೋಷಿಸಿದ್ದು, ಕೆಲವು ಗೊಂದಲದ ಕ್ಷೇತ್ರಗಳ ಕುರಿತು ಬಿಜೆಪಿ ಹೈಕಮಾಂಡ್ ನಾಯಕರು ಸಭೆ ನಡೆಸಿ, ಇದೀಗ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ರಾಜ್ಯದ ೨೦ ಕ್ಷೇತ್ರಗಳಿಗೆ ಸೇರಿದಂತೆ ೭೨ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದು, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಕೈಬಿಡಲಾಗಿದ್ದು, ಅಧಿಕೃತ ಅಭ್ಯರ್ಥಿಯಾಗಿ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಪ್ರತಾಪ್‌ಸಿಂಹ ಅವರು ಈ ಬಾರಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದರು. ತಾವೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿದ್ದರು. ಕೊನೆಯ ಕ್ಷಣದವರೆಗೂ ಪ್ರತಾಪ್ ಅವರ ಹೆಸರೇ ಕೇಳಿ ಬರುತ್ತಿತ್ತು. ಈ ನಡುವೆ ಜೆಡಿಎಸ್‌ನ ಸಾ.ರಾ. ಮಹೇಶ್ ಅವರ ಹೆಸರು ಕೇಳಿ ಬಂದಿತ್ತಾದರೂ ಅವರೇ ತಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ನಡುವೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಭಾಸ್ಕರ್‌ರಾವ್ ಕೂಡ ತಾನೂ ಕೂಡ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಜಿಲ್ಲೆಯ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಈ ಬಾರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ದರಲ್ಲದೆ ತಾನೂ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ದಿಢೀರಾಗಿ ಯುದುವೀರ್ ಅವರ ಹೆಸರು ಕೇಳಿ ಬರತೊಡಗಿತು. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಬೇಕೆಂದು ಕೂಗು-ಒತ್ತಾಯ ಕೊಡಗು ಹಾಗೂ ಮೈಸೂರು ಕಡೆಗಳಿಂದಲೂ ಕೇಳಿ ಬಂದಿದ್ದಲ್ಲದೆ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ನಿಯೋಗ ತೆರಳಿ ವರಿಷ್ಠರಲ್ಲಿ ಮನವಿ ಕೂಡ ಸಲ್ಲಿಸಿದ್ದರು. ಆದರೆ ಇದೀಗ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರತಾಪ್ ಸಿಂಹ ಅವರನ್ನು ಕೈಬಿಟ್ಟು ಯದುವೀರ್ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಟಿಕೆಟ್ ವಂಚಿತರಾದ ಪ್ರತಾಪ್ ಸಿಂಹ ಪರ ಈಗಾಗಲೇ, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.