ಮಡಿಕೇರಿ, ಮಾ. ೧೩: ದೇಶದ ಒಕ್ಕೂಟ ವ್ಯವಸ್ಥೆಗೆ, ಬಲವರ್ಧನೆಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯವರ್ಧ ನೆಗೆ ಶ್ರೇಷ್ಠ ಸಂವಿಧಾನ ಸೂಕ್ತ ಅಡಿಪಾಯ ಹಾಕಿಕೊಟ್ಟಿದೆ ಎಂದು ಮಡಿಕೇರಿಯ ಆರ್.ಆರ್. ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಬಿ.ಸಿ. ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ ೨೦೨೨-೨೩ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಿದರು.
ಸಂವಿಧಾನ ಎನ್ನುವುದು ದೇಶದ ಜೀವ ಸಂಕುಲಗಳನ್ನು ರಕ್ಷಿಸಿ ಉತ್ತಮವಾದ ಬದುಕು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಲ್ಲುವ ಹಕ್ಕು ಮತ್ತು ಕರ್ತವ್ಯವನ್ನು ಅಳವಡಿಸುವ ಮೂಲಕ ಜವಾಬ್ದಾರಿಯುತ ಭಾರತ ವನ್ನು ನಿರ್ಮಿಸಿ ಕೊಡುವಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಭಾರತ ರತ್ನ ಡಾ.ಬಿ.ಆರ್.ಅಬೇಂಡ್ಕರ್ ಅವರು ಬಡತನದಲ್ಲಿದ್ದರೂ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ, ದಲಿತ ಸಂಘರ್ಷ ಸಮಿತಿ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕಾರ್ಯವನ್ನು ಮಾಡುತ್ತಿದೆ. ಸಂಘಟನೆಯ ಸಾಮಾಜಿಕ ಚಿಂತನೆ ಮತ್ತು ಶಿಕ್ಷಣದ ಬಗ್ಗೆ ಅದಕ್ಕಿರುವ ಕಾಳಜಿ ಶ್ಲಾಘನೀಯ ಎಂದರು.
ವಿದ್ಯಾರ್ಥಿನಿಯರಾದ ಮೌಲ್ಯ ಹಾಗೂ ರಾಜೇಶ್ವರಿ ಪ್ರಾರ್ಥಿಸಿ, ಸಂಘಟನೆಯ ಸದಸ್ಯೆ ಹಾಗೂ ನಿವೃತ್ತ ಶಿಕ್ಷಕಿ ಪ್ರೇಮ ಕೃಷ್ಣಪ್ಪ ಸ್ವಾಗತಿಸಿದರು. ಉಪನ್ಯಾಸಕಿ ಡಾ. ಕನ್ನಿಕಾ ನಿರೂಪಿಸಿ, ನಿರ್ಮಲ ವಂದಿಸಿದರು.