ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕವಿತಾ ಬಂಧನ

ನವದೆಹಲಿ/ಹೈದರಾಬಾದ್, ಮಾ. ೧೫: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಬಂಧಿಸಿದ್ದಾರೆ. ಇಂದು ಹೈದರಾಬಾದ್‌ನಲ್ಲಿರುವ ಬಿಆರ್‌ಎಸ್ ಎಂಎಲ್ ಸಿ.ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ ಪುತ್ರಿಯನ್ನು ಬಂಧಿಸಿದೆ ಮತ್ತು ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ೪೪ ವರ್ಷದ ಕೆ. ಕವಿತಾ ಅವರನ್ನು ಮನಿ ಲಾಂಡರಿAಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿದೆ. ಆದರೆ ಈ ವರ್ಷ ಇಡಿ ನೀಡಿದ್ದ ಎರಡು ಸಮನ್ಸ್ಗಳನ್ನು ಅವರು ತಪ್ಪಿಸಿದ್ದರು. ‘ಸೌತ್ ಗ್ರೂಪ್' ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ.

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿ

ಶಿವಮೊಗ್ಗ, ಮಾ. ೧೫: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಸಭೆ ನಡೆಸಿದ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ ಹೊರತು ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಬಿಜೆಪಿ ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಅದನ್ನು ತಪ್ಪಿಸಲು ಸ್ಪರ್ಧೆಗೆ ಮುಂದಾಗಿದ್ದೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.