ಗೋಣಿಕೊಪ್ಪಲು, ಮಾ. ೧೮: ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷವು ಉತ್ತಮ ಅಭ್ಯರ್ಥಿಯನ್ನು ಚುನಾವಣೆಗೆ ಕಣಕ್ಕಿಳಿಸಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಮತಗಳನ್ನು ಬಿಜೆಪಿ ಪಕ್ಷಕ್ಕೆ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್‌ನಲ್ಲಿ ಕೆಲಸ ನಿರ್ವಹಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿಮ್ಮ ಮೇಲಿದೆ ಎಂದು ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಹೇಳಿದರು.

ಗೋಣಿಕೊಪ್ಪಲುವಿನ ದುರ್ಗಾಬೋಜಿ ಸಭಾಂಗಣದಲ್ಲಿ ವೀರಾಜಪೇಟೆ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್‌ನ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಕೇಂದ್ರ ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜನತೆಗೆ ನೀಡಿದೆ. ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ೪೦೦ ಸೀಟ್‌ಗಳನ್ನು ಗೆಲ್ಲುವ ವಿಶ್ವಾಸ ರಾಷ್ಟಿçÃಯ ನಾಯಕರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಮೈಸೂರು-ಕೊಡಗು ಕ್ಷೇತ್ರವನ್ನು ಬಿಜೆಪಿ ಅತೀ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಬೇಕಾಗಿದೆ. ರಾಜಮನೆತನದ ಯದುವೀರ್‌ರನ್ನು ಪಕ್ಷವು ಕಣಕ್ಕಿಳಿಸಿದೆ. ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಈ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಬೂತ್ ಮಟ್ಟದಲ್ಲಿ ಕ್ರೋಢೀಕರಿಸಲು ಇಂದಿನಿAದಲೇ ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ಪಕ್ಷದ ಪದಾಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು. ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ನೆಲ್ಲಿರ ಚಲನ್, ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ ಮಾತನಾಡಿದರು.

ಬಿಜೆಪಿ ಮಹಿಳಾ ಮೋರ್ಚಾದ ಬೊಟ್ಟಂಗಡ ದಶಮಿ ಪ್ರಾರ್ಥಿಸಿ, ವೀರಾಜ ಪೇಟೆ ಮಂಡಲದ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ ವಂದಿಸಿದರು. ವೀರಾಜಪೇಟೆ ಮಂಡಲದ ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಯುವ ಮೋರ್ಚಾ, ಒಬಿಸಿ ಮೋರ್ಚಾ, ರೈತ ಮೋರ್ಚಾ, ಮಹಿಳಾ ಮೋರ್ಚಾ, ಎಸ್ಸಿ ಮೋರ್ಚಾ ಸೇರಿದಂತೆ ಇನ್ನಿತರ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

-ಹೆಚ್.ಕೆ.ಜಗದೀಶ್