ಮಡಿಕೇರಿ, ಮಾ. ೧೮: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿದೇಯಕ ೨೦೨೪ಕ್ಕೆ ರಾಜ್ಯಪಾಲರ ಒಪ್ಪಿಗೆ ದೊರೆತ ಹಿನ್ನೆಲೆ ನಾಮಫಲಕಗಳಲ್ಲಿ ಶೇ. ೬೦ ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯ ಗೊಳಿಸಿದ ಹಿನ್ನೆಲೆ ಜಿಲ್ಲೆಯವರು ನಿಯಮ ಪಾಲಿಸಬೇಕು ಎಂದು ಪ್ರವಾ ಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೊಟೇಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಜಿಲ್ಲೆಯಲ್ಲಿಯೂ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಇರಬೇಕು. ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೊಟೇಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.೬೦ ರಷ್ಟು ಪ್ರದರ್ಶಿಸಬೇಕು/ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲಾ ಹೊಟೇಲ್, ರೆಸ್ಟೋರೆಂಟ್ಗಳು ಹೋಂಸ್ಟೇಗಳು, ರೆಸಾರ್ಟ್ಗಳು ತಮ್ಮ ನಾಮ ಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯಗೊಳಿಸುವಂತೆ ತಿಳಿಸಿದ್ದಾರೆ.