(ರಾಜಕೀಯ ವಿಶ್ಲೇಷಣೆ: ಕೆ.ಎಂ ಇಸ್ಮಾಯಿಲ್ ಕಂಡಕರೆ)
ಮಡಿಕೇರಿ, ಮಾ. ೨೭: ಇಡೀ ದೇಶದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯದುವೀರ ಶ್ರೀಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷö್ಮಣ್ ಅವರು ಕಣಕ್ಕಿಳಿದಿದ್ದಾರೆ.
ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿ ಈ ಬಾರಿ ಬಿಜೆಪಿ ರಾಜವಂಶಸ್ಥ ಯದುವೀರ ಒಡೆಯರ್ ಅವರಿಗೆ ಮಣೆ ಹಾಕಿದೆ. ಕಾಂಗ್ರೆಸ್ ಒಕ್ಕಲಿಗ ಮತಗಳ ಲೆಕ್ಕಾಚಾರದಲ್ಲಿ ೪೪ ವರ್ಷಗಳ ಬಳಿಕ ಒಕ್ಕಲಿಗ ಜನಾಂಗದ ಎಂ. ಲಕ್ಷö್ಮಣ್ ಅವರಿಗೆ ಮಣೆ ಹಾಕಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವು ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿ ಮಾರ್ಪಟ್ಟಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವುದರಿಂದ ಗೆಲುವು ಅವರಿಗೆ ಪ್ರತಿಷ್ಠೆಯಾಗಿದೆ. ಏತನ್ಮಧ್ಯೆ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೊಕ್ ಕೊಟ್ಟಿರುವುದರಿಂದ ಒಕ್ಕಲಿಗ ಜನಾಂಗದ ಮತಗಳು ಕೈ ಕೊಡುವ ಆತಂಕದಲ್ಲಿ ಬಿಜೆಪಿ ಪಾಳಯವಿದೆ. ಆದರೆ, ಪ್ರತಾಪ್ ಸಿಂಹ ಸ್ವತಃ ಯದುವೀರ ಪರ ಪ್ರಚಾರಕ್ಕೆ ಇಳಿದಿರುವುದು ಬಿಜೆಪಿಗೆ ಸಮಾಧಾನ ತಂದಿದೆ.
೨೦೧೯ ಲೋಕಸಭಾ ಚುನಾವಣೆಗೂ ಈ ಬಾರಿಯ ಲೋಕಸಭಾ ಚುನಾವಣೆಗೂ ಅಜಗಜಾಂತರ ವ್ಯತ್ಯಾಸವಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಇದೀಗ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ.
ನಾಯಕರ ಮಧ್ಯೆ ಮೈತ್ರಿಯಾಗಿದ್ದರೂ ಕೂಡ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಹೊಂದಾಣಿಕೆ ಇದುವರೆಗೆ ಕಂಡುಬAದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ.
ಕಳೆದ ಬಾರಿ ಸಿದ್ದರಾಮಯ್ಯ ಅವರು ಜಿದ್ದಿಗೆ ಬಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಸಿ ವಿಜಯ ಶಂಕರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಹೀನಾಯವಾಗಿ ಸೋಲು ಕಂಡು ಸಿದ್ದರಾಮಯ್ಯ ಅವರಿಗೆ ಮುಖಭಂಗ ಎದುರಾಗಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಾಗಿವೆ. ಕಳೆದ ಬಾರಿಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕೇವಲ ಒಬ್ಬ ಶಾಸಕ ಮಾತ್ರ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಐವರು ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ.
ಕಳೆದ ಬಾರಿ ನಾಲ್ವರು ಬಿಜೆಪಿ ಶಾಸಕರಿದ್ದ ಸಂಖ್ಯೆ ಇದೀಗ ಕೇವಲ ಒಂದಕ್ಕೆ ಬಂದಿಳಿದಿವೆ. ಮೂರು ಶಾಸಕರಿದ್ದ ಜೆಡಿಎಸ್ ಸಂಖ್ಯೆ ಎರಡಕ್ಕೆ ಕುಸಿದಿದೆ. ಅದಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಭಾವ ಬೀರುವ ಸಾಧ್ಯತೆಗಳಿವೆ.
ಬಿಜೆಪಿಗೆ ಕಳೆದ ಎರಡು ಚುನಾವಣೆಯಲ್ಲಿ ದೊಡ್ಡ ಅಂತರ ಮುನ್ನಡೆ ತಂದುಕೊಟ್ಟಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಇಬ್ಬರೂ ಕೂಡ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ. ಎ.ಎಸ್. ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಅವರು ಅಭಿವೃದ್ಧಿ ಕಾರ್ಯಗಳ ಮೂಲಕ ವೈಯುಕ್ತಿಕ ನೆಲೆಗಟ್ಟಿನಲ್ಲಿ ಮತದಾರರನ್ನು ಸೆಳೆಯುವತ್ತಾ ಸಾಗಿದ್ದಾರೆ.
ಕಳೆದ ಎರಡು ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸುಲಭ ತುತ್ತಾದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಕಾಣುವಷ್ಟು ಸುಲಭವಲ್ಲ. ಯದುವೀರ ಒಡೆಯರ್ ಸ್ಪರ್ಧಿಸಿದ್ದಾರೆ ಎಂಬ ಕಾರಣಕ್ಕೆ ಅನಾಯಾಸವಾಗಿ ಮತಗಳು ಬರುವ ಲೆಕ್ಕಾಚಾರದಲ್ಲಿ ಬಿಜೆಪಿ ಪಾಳಯವಿದೆ.
ಒಟ್ಟಿನಲ್ಲಿ ಕೃಷ್ಣ ಮತ್ತು ಲಕ್ಷö್ಮಣನ ಯುದ್ಧದಲ್ಲಿ ಗೆಲ್ಲುವವರಾರು ಸೋಲುವವರಾರು ಎಂದು ಜೂನ್ ೪ರವರೆಗೂ ಕಾಯಬೇಕಾಗಿದೆ. ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರವಾರು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಪಡೆದ ಮತಗಳು, ಮುನ್ನಡೆ ಎಲ್ಲಾ ಅಂಕಿ ಅಂಶಗಳನ್ನು ಇಲ್ಲಿ ನೀಡಲಾಗಿದೆ.