ಮಡಿಕೇರಿ, ಏ. ೪: ಕೊಡಗು ಜಿಲ್ಲೆಯಲ್ಲಿ ಮೇ ೮ ರವರೆಗೆ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೫ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ. ದನ, ಎಮ್ಮೆ, ಆಡು, ಕುರಿ, ಹಂದಿ ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಅರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿರುತ್ತದೆ. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.

ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿರುತ್ತದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ. ೨೦ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿರುತ್ತದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು ೭೦ ಲಸಿಕಾದಾರರನ್ನೊಳಗೊಂಡ ಒಟ್ಟು ೧೧ ತಂಡಗಳನ್ನು ರಚಿಸಲಾಗಿರುತ್ತದೆ. ಲಸಿಕಾದಾರರು ರೈತರ/ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ. ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ ಮಡಿಕೇರಿ ೯೪೪೮೬೪೭೨೭೬, ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ ಸೋಮ ವಾರಪೇಟೆ ೯೪೪೮೫೯೭೪೯೬, ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ ವೀರಾಜಪೇಟೆ ೯೧೪೧೦೯೩೯೯೬, ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ ಕುಶಾಲನಗರ ೯೪೪೮೪ ೨೨೨೬೯ ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಪೊನ್ನಂಪೇಟೆ ೯೪೪೯೦೮೧೩೪೩ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.