ಸೋಮವಾರಪೇಟೆ, ಏ. ೩: ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್. ಮಹೇಶ್ ಮಾತನಾಡಿ, ನಡೆದಾಡುವ ದೇವರೆಂದೇ ಹೆಸರಾಗಿದ್ದ ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಗಳ ಮೂಲಕ ಸಮಾಜದಲ್ಲಿ ಪೂಜ್ಯ ಸ್ಥಾನ ಅಲಂಕರಿಸಿದವರು. ಅವರ ಆದರ್ಶಗಳ ಪಾಲನೆಯೊಂದಿಗೆ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಪ.ಪಂ. ಮುಖ್ಯಾಧಿಕಾರಿ ಲೋಕ್ಯಾ ನಾಯಕ್, ಆರೋಗ್ಯಾಧಿಕಾರಿ ಜಾಸಿಂ ಖಾನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ಪ್ರಮುಖರಾದ ಸುಲೈಮಾನ್, ರಂಗಸ್ವಾಮಿ, ಡ್ಯಾನಿಯಲ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಗುಡ್ಡೆಹೊಸೂರು: ಇಲ್ಲಿನ ಡಾ|| ಶ್ರೀ ಶಿವಕುಮಾರ ಸ್ವಾಮಿಗಳ ವೃತ್ತದಲ್ಲಿ ವೀರಶೈವ ಸಮಾಜದ ಸದಸ್ಯರು ಮತ್ತು ಸಾರ್ವಜನಿಕರು ಸೇರಿ ಸ್ವಾಮಿಗಳ ಜಯಂತಿಯನ್ನು ಸರಳವಾಗಿ ಆಚರಿಸಿದರು. ಸ್ವಾಮಿಗಳ ಭಾವಚಿತ್ರಕ್ಕೆ ಇಲ್ಲಿನ ಅರ್ಚಕರಾದ ರಾಜಯ್ಯ ಅವರು ಪೂಜೆ ನೆರವೇರಿಸಿದರು. ನಂತರ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.