ವೀರಾಜಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಅಧಿಕಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ, ವೀರಾಜಪೇಟೆ ಪುರಸಭೆ ಸಹಯೋಗದಲ್ಲಿ ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.
ಮತದಾನದ ಕಾರ್ಯದಲ್ಲಿ ಹಬ್ಬದಂತೆ ಎಲ್ಲರೂ ಸಂಭ್ರಮಿಸಬೇಕು. ಈ ಹಬ್ಬದಲ್ಲಿ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ತಾ. ೨೬ ರಂದು ಮತದಾನ ಜರುಗಲಿದ್ದು, ತಾವೆಲ್ಲರೂ ಮತದಾರರ ಗುರುತಿನ ಚೀಟಿಯೊಂದಿಗೆ ಹಾಗೂ ಚುನಾವಣಾ ಆಯೋಗದ ಸೂಚಿಸಿದ ದಾಖಲೆಗಳೊಂದಿಗೆ ಮತದಾನ ಕೇಂದ್ರಕ್ಕೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಬೇಕು. ರಾಷ್ಟçವು ತಮಗೆ ನೀಡಿದ ಮತದಾನದ ಹಕ್ಕನ್ನು ಅರ್ಹರಿಗೆ ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು. ತಾವು ಮತ ಚಲಾಯಿಸುವುದರೊಂದಿಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ನೆರೆಹೊರೆಯವರನ್ನು ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದು ಅರಿವು ಮೂಡಿಸಲಾಯಿತು.
ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ಪುರಸಭೆ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಹುಲುಗುಂದ (ಹಾರಂಗಿಯಲ್ಲಿ) ಮತದಾನ ಜಾಗೃತಿಗಾಗಿ ಜಾಥಾ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಪ್ರಯುಕ್ತ ನಡೆಯುವ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಹುಲುಗುಂದ ಗ್ರಾಮದ ವಿವಿಧ ಮಹಿಳಾ ಸಂಘದ ಮಹಿಳೆಯರಿಗೆ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಮತದಾನ ನಮ್ಮೆಲ್ಲರ ಹಕ್ಕು ಮತದಾನದಿಂದ ಯಾರೂ ದೂರ ಉಳಿಯಬಾರದು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಬಾರಿ ಶೇಕಡವಾರು ಮತದಾನದ ಪ್ರಮಾಣ ಹೆಚ್ಚಿಸಲು, ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಮಹಿಳಾ ಸಂಘದ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಪ್ರಜಾಪ್ರಭುತ್ವವನ್ನು ಬಲಗೊಳಿಸುವ ಶಕ್ತಿ ಮತದಾರರಿಗೆ ಇದೆ. ಎಲ್ಲ ಮತದಾರರು ನಮ್ಮ ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸುಭದ್ರವಾದ ದೇಶ ಕಟ್ಟಲು ಸಹಕರಿಸಿ ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಮಾತನಾಡಿ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮದ ಕಚೇರಿ ಅವರಣದಲ್ಲಿ ರಂಗೋಲಿ ಸ್ಪರ್ಧೆ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರು ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ. ಅದರಂತೆ ಎಲ್ಲರೂ ಮತದಾನ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸದಸ್ಯರಾದ ಮಣಿಕಂಠ, ಮಹಿಳಾ ಸಂಘದ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ದಾಪುರ: ಮುಂದಿನ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ನಡೆಯಲು ಜಿಲ್ಲಾ ಪಂಚಾಯಿತಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಸಾರ್ವಜನಿಕರು ಹೆಚ್ಚು ಮತದಾನದಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ವಿವಿಧ ಬಣ್ಣದ ರಂಗೋಲಿಯನ್ನು ಬಿಡಿಸಿದರು.