ಸೋಮವಾರಪೇಟೆ, ಏ. ೫: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ನವೀನ್ಕುಮಾರ್, ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಮಾತ್ರ ಚುನಾವಣೆ ಸುಸೂತ್ರವಾಗಿ ನಡೆಯುತ್ತದೆ.
ಎಲ್ಲಾ ಮತಗಟ್ಟೆ ಕೇಂದ್ರಗಳು ಶುಚಿತ್ವಕ್ಕೆ ಆದ್ಯತೆ ನೀಡುವುದರೊಂದಿಗೆ ಮೂಲಭೂತ ಅವಶ್ಯಕತೆಗಳಾದ ಕುಡಿಯುವ ನೀರು, ವಿದ್ಯುತ್, ಶೌಚಾಲಯ ವ್ಯವಸ್ಥೆಯನ್ನು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು.
ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದರು.
ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಮಾತನಾಡಿ, ಸೋಮವಾರಪೇಟೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಫರ್ಧೆ ಆಯೋಜಿಸಲಾಗಿದೆ.
ತಾ. ೧೩ ರಂದು ಸೋಮವಾರಪೇಟೆಯಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದೆ. ತಾ. ೧೯ ರಂದು ಸೈಕಲ್ ಮತ್ತು ಬೈಕ್ ರ್ಯಾಲಿ ನಡೆಯಲಿದೆ. ವಿಶೇಷಚೇತನರಿಗೆ ಆದ್ಯತೆ ನೀಡುವ ಉದ್ದೇಶದಿಂದ ತಾ. ೨೪ ರಂದು ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ತ್ರಿಚಕ್ರ ರ್ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಕ್ಕಳಿಂದ ಪೋಷಕರಿಗೆ ಪತ್ರ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಿಲ್ಲೆಯ ವಸತಿ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಪತ್ರ ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.
ಮತದಾನದ ಮಹತ್ವ ಕುರಿತು ಮತ್ತು ಮತದಾನದ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾ ನಾಯ್ಕ್ ಹೇಳಿದರು.
ವೇದಿಕೆಯಲ್ಲಿ ಅಕ್ಷರದಾಸೋಹ ವಿಭಾಗದ ಸಹಾಯಕ ನಿರ್ದೇಶಕ ಕಾಳನಾಯಕ್, ಮತಗಟ್ಟೆ ತರಬೇತಿ ಅಧಿಕಾರಿಗಳಾದ ಕಿರಣ್, ಜಯಕುಮಾರ್, ಪೂವಯ್ಯ ಇದ್ದರು.