ಕೂಡಿಗೆ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಲು ಜಿಲ್ಲಾ ಪಂಚಾಯಿತಿ ಸೂಚನೆ ಅನ್ವಯ ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಮಾರುಕಟ್ಟೆ ಸಭಾಂಗಣದಲ್ಲಿ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾರುಕಟ್ಟೆ ಸಭಾಂಗಣದಲ್ಲಿ ಮಹಿಳೆಯರು ವಿವಿಧ ಬಣ್ಣಗಳ ರಂಗೋಲಿಯನ್ನು ಬಿಡಿಸಿದರು. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಅಭಿವೃದ್ಧಿ ಅಧಿಕಾರಿ ಎಸ್. ಸಂತೋಷ್, ಮಂಜುಳಾ, ಎಸ್ಡಿ.ಎ ಪುನೀತ್ ಕುಮಾರ್, ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
ಸೋಮವಾರಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿಗೆ ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇಲ್ಲಿನ ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಪಟ್ಟಣದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮತ್ತು ಪಟ್ಟಣ ಪಂಚಾಯಿತಿ ಆವರಣದಲ್ಲಿ ರಂಗೋಲಿ ಸ್ಪರ್ಧೆಗಳು ನಡೆಯಿತು. ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕದಲ್ಲಿ ಏಪ್ರಿಲ್ ೨೬ ಹಾಗೂ ಮೇ ೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಪ.ಪಂ. ಆರೋಗ್ಯ ನಿರೀಕ್ಷಕ ಜಾಸಿಂ ಖಾನ್ ಹೇಳಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ನವೀನ್ ಕುಮಾರ್, ಮುಖ್ಯಾಧಿಕಾರಿ ಲೋಕ್ಯ ನಾಯಕ್, ಸಿಬ್ಬಂದಿಗಳಾದ ರೂಪ, ವನಿತಾ, ಹೊನಲಾದೇವಿ, ಆದಿಲ್ ಪಾಷಾ ಸೇರಿದಂತೆ ಇತರರು ಹಾಜರಿದ್ದರು.
ಕುಶಾಲನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ರಂಗೋಲಿ ಸ್ಪರ್ಧೆ ಕುಶಾಲನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಡೆದವು.
ಚುನಾವಣಾ ಆಯೋಗದ ಆದೇಶದಂತೆ ಕುಶಾಲನಗರ ಪುರಸಭೆ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಸ್ಥಳೀಯ ಸ್ತಿçà ಶಕ್ತಿ ಸಂಘಟನೆಗಳ ಸದಸ್ಯರು, ಪಂಚಾಯಿತಿ ಸಿಬ್ಬಂದಿಗಳು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡರು.
ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ತಿಳಿಸಿದ್ದಾರೆ. ಸ್ಥಳೀಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.