ಸೋಮವಾರಪೇಟೆ, ಏ. ೬ : ಈ ಬಾರಿಯ ಲೋಕಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಪಶು ಸಂಗೋಪನಾ ಇಲಾಖಾ ಸಚಿವ ವೆಂಕಟೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವರು, ಸ್ಥಳೀಯ ಕಾಂಗ್ರೆಸ್ ಮುಖಂಡರೊAದಿಗೆ ಸಭೆ ನಡೆಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ತಲುಪಿವೆ. ಜಿಲ್ಲೆಯಲ್ಲಿ ಶಾಸಕದ್ವಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೂ ಲಭ್ಯವಾಗುತ್ತಿದೆ ಎಂದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿ ಕಾರ್ಯಕರ್ತನೂ ಸಹ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಕರೆ ನೀಡಿದರು.
ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಕಳೆದ ವಿಧಾನ ಸಭಾ ಚುನಾವಣೆಯಂತೆ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಹಲವರು ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ನಮ್ಮದೇ ಪಕ್ಷದ ಲೋಕಸಭಾ ಸದಸ್ಯರಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮಗೊಳ್ಳಲಿವೆ. ಈ ಹಿನ್ನೆಲೆ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ಕಾಂಗ್ರೆಸ್ ಪರವಾಗಿ ಉತ್ತಮ ವಾತಾವರಣವಿದ್ದು, ಇದನ್ನು ಬಳಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಮುಖರಾದ ಕೆ.ಎ. ಯಾಕೂಬ್, ಹೆಚ್.ಆರ್. ಸುರೇಶ್, ವಿ.ಎ. ಲಾರೆನ್ಸ್, ವೆಂಕಟೇಶ್, ಕೆ.ಎ. ಆದಂ, ಶೀಲಾ ಡಿಸೋಜ, ಹೆಚ್.ಎ. ನಾಗರಾಜು, ಬ್ಲಾಕ್ ಕಾರ್ಯದರ್ಶಿ ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.