ಗೋಣಿಕೊಪ್ಪಲು, ಏ. ೭: ತಾ. ೧೪ ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಾಹಿತಿ ನೀಡಿದರು.

ಪಟ್ಟಣದ ಕೊಡಗು ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ತಾ.೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿಗೆ, ಸಂಜೆ ೪ ಗಂಟೆಗೆ ವೀರಾಜಪೇಟೆಗೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ತಾ.೧೧ ಹಾಗೂ ೧೨ ರಂದು ಕೊಡಗಿನ ೨ ಕ್ಷೇತ್ರದಲ್ಲಿ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಲಕ್ಷö್ಮಣ್ ಗೌಡ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ವಿವರಿಸಿದರು.

ಕೊಡಗಿನ ೨ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ಗೆಲುವಿಗೆ ಉತ್ತಮ ಅವಕಾಶವಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಡೆದ ಮತಕ್ಕಿಂತ ಹೆಚ್ಚಿನ ಮತ ಪಡೆಯಲು ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಈಗಾಗಲೇ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ೨೫೦ ಕೋಟಿ ಅನುದಾನವನ್ನು ವಿನಿಯೋಗ ಮಾಡಲಾಗಿದೆ. ಅಭಿವೃದ್ಧಿ ಯೋಜನೆ, ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕಳೆದ ೨೫ ವರ್ಷಗಳಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವಲ್ಲಿ ವಿಫಲವಾಗಿತ್ತು. ಇದೀಗ ಕಾಂಗ್ರೆಸ್ ಯುಗ ಆರಂಭವಾಗಿದ್ದು, ಉತ್ತಮ ಶಾಸಕರು ಕೊಡಗಿಗೆ ದೊರೆತಿದ್ದು, ಪಕ್ಷ ಸಂಘಟನೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಟಿ.ಪಿ. ರಮೇಶ್, ಮಾಜಿ ಎಂ.ಎಲ್.ಸಿ.ಗಳಾದ ವೀಣಾ ಅಚ್ಚಯ್ಯ, ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಪ್ರಮುಖರಾದ ತಾರ ಅಯ್ಯಮ್ಮ, ಮತ್ರಂಡ ದಿಲ್ಲು, ಕೊಲ್ಯದ ಗಿರೀಶ್, ಕಾಳಿಮಾಡ ಪ್ರಶಾಂತ್, ಅನೀಫ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.