ಮಡಿಕೇರಿ, ಏ. ೧೩: ಲೋಕಸಭಾ ಚುನಾವಣಾ ಅಖಾಡವು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿವೆ. ದೇಶದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು.
ಮೈಸೂರು ರಾಜವಂಶಸ್ಥ ಯದುವೀರ್ ಶ್ರೀಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವು ಎಲ್ಲರ ಗಮನ ಸೆಳೆಯುತ್ತಿವೆ. ಮತ್ತೊಂದೆಡೆ ಸುದ್ದಿಗೋಷ್ಠಿಯ ಮುಖಾಂತರ ಸದಾ ಸುದ್ದಿಯಲ್ಲಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷö್ಮಣ್ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಒಂದೆರಡು ಕ್ಷೇತ್ರ ಬಿಟ್ಟರೆ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಆದರೆ ೨೦೧೪ ರಿಂದೀಚೆಗೆ ಮೈಸೂರಿನ ರಾಜಕೀಯವನ್ನು ಒಮ್ಮೆ ಗಮನಿಸಿದರೆ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ರಾಜಕೀಯ ಸ್ಪಷ್ಟವಾಗಿ ತಿಳಿಯುತ್ತವೆ. ಮೈಸೂರಿನಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮೈಸೂರಿನಲ್ಲಿ ೨೦೧೪ರಿಂದಲೇ ಬಿಜೆಪಿ ಮತ್ತು ಜೆಡಿಎಸ್ ಅನಧಿಕೃತ ಮೈತ್ರಿ ಇದೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ಮತ್ತು ಬಿಜೆಪಿ ಅಧಿಕೃತವಾಗಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆದರೆ ಮೈಸೂರು ಮತ್ತು ಕೊಡಗಿನಲ್ಲಿ ಜೆಡಿಎಸ್ ಮತಗಳು ಬಿಜೆಪಿ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿತ್ತು. ೨೦೧೪ ರಲ್ಲಿ ಜೆಡಿಎಸ್ ಅಭ್ಯರ್ಥಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಕೂಡ ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಅತೀ ಹೆಚ್ಚು ಮತಗಳು ಚಲಾವಣೆಯಾಗಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಜೆಡಿಎಸ್ ಪರವಾಗಿ ಬಿಜೆಪಿ ಮತಗಳು ಚಲಾವಣೆಯಾಗುತ್ತದೆ. ೨೦೧೩,೨೦೧೮ ಮತ್ತು ೨೦೨೩ ವಿಧಾನಸಭಾ ಚುನಾವಣೆಯ ಅಂಕಿಅAಶಗಳನ್ನು ಗಮನಿಸಿದರೆ ಇದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಪಿರಿಯಾಪಟ್ಟಣ, ಹುಣಸೂರು, ಚಾಮರಾಜ, ಕೃಷ್ಣರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಮತಗಳು ಜೆಡಿಎಸ್ ಪರವಾಗಿ ಚಲಾವಣೆಯಾಗಿತ್ತು.
೨೦೧೮ರಲ್ಲಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡ ಅವರ ಪರವಾಗಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಮತಗಳು ಚಲಾವಣೆಯಾಗಿತ್ತು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರಿನಲ್ಲಿ ಜಿ.ಟಿ. ದೇವೇಗೌಡ ಅವರ ಪುತ್ರ ಜಿ.ಡಿ. ಹರೀಶ್ ಗೌಡ ಅವರ ಪರವಾಗಿ ಬಿಜೆಪಿ ಮತಗಳು ಚಲಾವಣೆಯಾಗಿತ್ತು. ಆದರೆ ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪರವಾಗಿ ಚಲಾವಣೆಯಾಗುತ್ತಿದ್ದ ಮತಗಳು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚಲಾವಣೆಯಾಗಿತ್ತು. ಕೊಡಗಿನಲ್ಲಿ ಜೆಡಿಎಸ್ ಆಟಕ್ಕೂ, ಲೆಕ್ಕಕ್ಕೂ ಇಲ್ಲದಂತಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ತೆನೆ ಹೊತ್ತ ಮಹಿಳೆಯ ಕೈ ಹಿಡಿಯುವ ಬಿಜೆಪಿಗರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೈ ಹಿಡಿಯುವ ತೆನೆ ಹೊತ್ತ ಮಹಿಳೆಯ ಮತದಾರರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಶೇ ೫೨.೨ ಮತಗಳನ್ನು ಪಡೆದಿತ್ತು.
ಕಾಂಗ್ರೆಸ್+ಜೆಡಿಎಸ್ ಅಭ್ಯರ್ಥಿ ಶೇ. ೪೧.೮ ಮತಗಳಷ್ಟೇ ಪಡೆದುಕೊಂಡಿದ್ದರು. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಶೇ. ೪೪.೯ ಮತಗಳನ್ನು ಪಡೆದರೆ, ಏಕೈಕ ಶಾಸಕ ಗೆಲ್ಲುವುದರ ಮೂಲಕ ಬಿಜೆಪಿ ಶೇ. ೨೯.೧ ಮತಗಳಿಗಷ್ಟೇ ಸೀಮಿತಗೊಂಡಿತ್ತು.
ಎರಡು ಶಾಸಕರು ಗೆಲುವು ಸಾಧಿಸುವುದರ ಮೂಲಕ ಜೆಡಿಎಸ್ ಪಕ್ಷವು ಶೇ. ೧೯.೮ ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಡೆದ ಮತಗಳ ಕ್ಷೇತ್ರವಾರು ಮತಗಳ ವಿವರವನ್ನು ಇಲ್ಲಿ ನೀಡಲಾಗಿದೆ.
- ಕೆ.ಎಂ ಇಸ್ಮಾಯಿಲ್ ಕಂಡಕರೆ