ಮಡಿಕೇರಿ, ಏ. ೧೫: ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ತಾ. ೧೭ ರಂದು (ನಾಳೆ) ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ತಿಳಿಸಿದ್ದಾರೆ.

ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಪೂಜ್ಯನೀಯ ಭಾವದಿಂದ ನೋಡುವ ಪಕ್ಷವಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಇದನ್ನು ಸಹಿಸಲಾಗದೆ ಕುಮಾರಸ್ವಾಮಿಯವರು ಮಹಿಳೆಯರನ್ನು ಅವಮಾನಿಸಿ ಮಾತನಾಡಿದ್ದಾರೆ. ಈ ಸಂಬAಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರುಗಳು ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎನ್‌ಡಿಎ ಕೂಟದಿಂದ ಕುಮಾರಸ್ವಾಮಿಯವರನ್ನು ಉಚ್ಛಾಟನೆ ಮಾಡಬೇಕೆಂದು ಒತ್ತಾಯಿಸಿದರು.

ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇಂದಲ್ಲ ನಾಳೆ ಅವಕಾಶ ಸಿಗಲಿದೆ ಕಾದು ನೋಡಿ ಎಂದು ಹೇಳಿದರೂ ಅವರು ಕೇಳಲಿಲ್ಲ ಎಂದು ವೀಣಾ ಅಚ್ಚಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ ಮಾತನಾಡಿ, ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆ ಖಂಡನೀಯವಾಗಿದ್ದು, ಮಹಿಳಾ ಸಮೂಹ ಅವರನ್ನು ಧಿಕ್ಕರಿಸಬೇಕೆಂದು ಹೇಳಿದರು. ಮಹಿಳೆಯರಿಗೆ ಮಾಸಿಕ ೨ ಸಾವಿರ ಹಾಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಬೇರೆ ಎಲ್ಲಿಯೂ ನೀಡುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ನೀಡುತ್ತಿದೆ. ಇದನ್ನು ಕುಮಾರಸ್ವಾಮಿಯವರಿಗೆ ಸಹಿಸಲಾಗುತ್ತಿಲ್ಲ ಎಂದು ಚಂದ್ರಕಲಾ ನುಡಿದರು.

ಗೋಷ್ಠಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶೈಲಾ ಕುಟ್ಟಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಉಪಸ್ಥಿತರಿದ್ದರು.