ಮಡಿಕೇರಿ, ಏ. ೧೫: ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಪತ್ರಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ರದ್ದು ಮಾಡಿದ್ದರಿಂದ ಶಿಕ್ಷಕ ವರ್ಗಕ್ಕೆ ಅನ್ಯಾಯವಾಗಿದೆ. ಹಳೆ ಪಿಂಚಣಿ ಯೋಜನೆಯ ಮರು ಜಾರಿಗೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಸಂಬAಧಪಟ್ಟವರಿಗೆ ಮನವಿ ಸಲ್ಲಿಸಿ ಚಾಲನೆಗೆ ಕ್ರಮವಹಿಸಲಾಗಿದೆ. ಅಲ್ಲದೇ ಶಿಕ್ಷಕರ, ಉಪನ್ಯಾಸಕರ ಹಲವಾರು ಸಮಸ್ಯೆಗಳ ಬಗ್ಗೆ ತನಗೆ ಅರಿವಿದ್ದು, ತಾನು ಗೆದ್ದು ಬಂದರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಮಂಜುನಾಥ್ ಕುಮಾರ್ ಹೇಳಿದರು.
ಕಾಂಗ್ರೆಸ್ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿರುವ ಕಾಂಗ್ರೆಸ್ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಮಂಜುನಾಥ್ ಕುಮಾರ್ ಅವರ ಗೆಲುವಿಗೆ ಶ್ರಮಿಸಲಿದ್ದಾರೆ. ಶಿಕ್ಷಕರಾಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮಂಜುನಾಥ್ ಕುಮಾರ್ ಅವರಿಗೆ ಅರಿವಿದೆ ಎಂದು ಹೇಳಿದರು. ನೈರುತ್ಯ ಕ್ಷೇತ್ರದಲ್ಲಿ ೧೯,೩೮೯ ಮತದಾರರಿದ್ದಾರೆ ಎಂದು ಅವರು ಮಾಹಿತಿಯಿತ್ತರು.
ಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್ ಯಲ್ಲಪ್ಪ, ನಗರಸಭಾ ನಾಮನಿರ್ದೇಶಿತ ಸದಸ್ಯ ಮಂಡೀರ ಸದಾ ಮುದ್ದಪ್ಪ, ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.