ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ
ಮಂಡ್ಯ, ಏ. ೧೭; ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ ೨೪ ಸಾವಿರಕ್ಕೆ ೧ ಲಕ್ಷ ರೂ. ಸೇರಿಸಿ ೧ ಲಕ್ಷದ ೨೪ ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಇಂದು ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದಿದ್ದೇವೆ. ೫ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ನೋಡಿದ್ದೇನೆ ಎಂದರು. ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ. ಇನ್ನೊಂದು ಕಡೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು" ಬಿಜೆಪಿ ಹೋರಾಟ ನಡೆಸುತ್ತಿದೆ ಎಂದರು.
ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ 'ಕೈ' ಬಲಪಡಿಸಬೇಕಾ?
ಚಿಕ್ಕಮಗಳೂರು, ಏ. ೧೭: ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಮೂಡಿಗೆರೆ ತಾಲೂಕಿನಲ್ಲಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಮತಯಾಚನೆ ಮಾಡಿದ ದೇವೇಗೌಡರು, ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆ ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿರುವ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಅವರ ಕೈಯನ್ನ ಏಕೆ ಬಲಪಡಿಸಬೇಕು? ೯ ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿಕೊಂಡರಲ್ಲಾ ಅದಕ್ಕಾ ಎಂದು ಪ್ರಶ್ನಿಸಿದ್ದಾರೆ. ಅಮೆರಿಕದಲ್ಲಿ ದುಡಿದು ತಂದಿದ್ದ ಹಣದಲ್ಲಿ ಉದ್ಯಮಿಯೊಬ್ಬರು ಬಿಡದಿ ಬಳಿ ಐ.ಟಿ ಕಂಪನಿ ಸ್ಥಾಪನೆ ಮಾಡಲು ಮುಂದಾಗಿದ್ದರು. ಅದರ ಹಿಂದಿನ ದಿನ ಇವರು ಸುಳ್ಳು ಕ್ರಯಪತ್ರ ಸಿದ್ಧಡಿಸಿದ್ದರು. ನನ್ನ ಬಳಿ ದಾಖಲೆ ಇದೆ ಎಂದು ಅದನ್ನು ಮುಂದಿಟ್ಟುಕೊAಡು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗೆ ಹೋಗಿದ್ದರು. ಎರಡೂ ಕಡೆ ಮುಖಭಂಗವಾದ ಬಳಿಕ ಆ ವ್ಯಕ್ತಿಯ ಮಗಳನ್ನು ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಪಕ್ಕದ ಮನೆಯಲ್ಲಿ ಒಂಬತ್ತು ದಿನ ಇಟ್ಟಿದ್ದರು. ಆಸ್ತಿ ಪತ್ರಕ್ಕೆ ಸಹಿ ಹಾಕಿ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಧಮ್ಕಿ ಹಾಕಿದ್ದರು ಇಂಥವರ ಕೈ ಬಲಪಡಿಸಬೇಕಾ’ ಎಂದು ಮರುಪ್ರಶ್ನಿಸಿದರು.
ಲೋಕಸಭೆ ಚುನಾವಣೆಗೆ ಟಿಎಂಸಿ ಪ್ರಣಾಳಿಕೆ ಬಿಡುಗಡೆ
ಕೋಲ್ಕತಾ, ಏ. ೧೭: ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬಂದರೆ ಸಿಎಎ ರದ್ದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ. ಇಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಟಿಎಂಸಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಜ್ಯಸಭಾ ಸದಸ್ಯ ಡೆರೆಕ್ ಒ'ಬ್ರೇನ್ ಅವರು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಯಂತ್ರಿಸುತ್ತೇವೆ. ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅನ್ನು ರದ್ದುಗೊಳಿಸುತ್ತೇವೆ. ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ)ಯನ್ನು ಸಹ ತಡೆಯುತ್ತೇವೆ ಎಂದು ಟಿಎಂಸಿ ನಾಯಕ ಅಮಿತ್ ಮಿತ್ರಾ ಅವರು ಭರವಸೆ ನೀಡಿದರು.
ಕೇಸರಿ ಶಾಲು ಹಾಕಿ ಬೆಟ್ಟ ಹತ್ತಿದರೆ ರಾಮನ ಭಕ್ತರಾಗಲ್ಲ
ರಾಮನಗರ, ಏ. ೧೭: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿಯು ಐಟಿ, ಇಡಿ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಪ್ರಯೋಗಿಸುತ್ತಿದೆ. ಈ ಪ್ರಯೋಗಗಳು ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದು, ನಮಗೆ ಇದು ಹೊಸತಲ್ಲ ಎಂಬ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಭೈರೇಗೌಡರು, ಜೆಡಿಎಸ್ ಮುಖಂಡರಾದ ರಾಜಶೇಖರ್ ಅವರ ಪಕ್ಷ ಸೇರ್ಪಡೆ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಕಳೆದ ಮೂರ್ನಾಲ್ಕು ದಿನಗಳಿಂದ ನಿಮ್ಮ ಆಪ್ತರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು ೧೦ ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ ಎಂದರು. ಅವರು ಏನಾದರೂ ಮಾಡಿ ನಮ್ಮ ನಾಯಕರನ್ನು ಕುಗ್ಗಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳು ಯಶಸ್ಸಾಗುವುದಿಲ್ಲ. ಐಟಿ, ಇಡಿ, ಸಿಬಿಐ ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಕಟ್ಟಿಹಾಕಿ ಸೋಲಿಸಲು ಬಂದಿದ್ದಾರೆ. ಇದು ನಮಗೆ ಹೊಸತಲ್ಲ. ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಇದೇ ತಂತ್ರ ಅನುಸರಿಸುತ್ತಿದೆ ಎಂದರು.
ಕಾAಗ್ರೆಸ್ ವಿರುದ್ಧ ಅಸಭ್ಯ ಹೇಳಿಕೆ: ನೋಟೀಸ್
ಹೈದರಾಬಾದ್, ಏ. ೧೭: ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ, ಆಕ್ಷೇಪಾರ್ಹ ಮತ್ತು ಅಸಭ್ಯ ಹೇಳಿಕೆ ನೀಡಿದ್ದಕ್ಕಾಗಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಮುಖ್ಯಸ್ಥ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೇಂದ್ರ ಚುನಾವಣಾ ಆಯೋಗ (ಇಸಿಐ) ನೋಟಿಸ್ ಜಾರಿ ಮಾಡಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ''ಲಟ್ಖೋರ್'' ಮತ್ತು ''ಚವಾಟಾ ದಡ್ಡಮಾಸ್'' ಮತ್ತು ನಿಷ್ಪ್ರಯೋಜಕ ಫೆಲೋಗಳು ಎಂದು ಕರೆದ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ ಚಂದ್ರಶೇಖರ್ ರಾವ್ ಅವರಿಗೆ ಸೂಚಿಸಿದೆ. ಏಪ್ರಿಲ್ ೧೮, ೨೦೨೪ ರಂದು ಬೆಳಗ್ಗೆ ೧೧ ಗಂಟೆಯೊಳಗೆ ಕಾಂಗ್ರೆಸ್ ವಿರುದ್ಧ "ಅಶ್ಲೀಲ", "ಅವಹೇಳನಕಾರಿ" ಮತ್ತು "ಆಕ್ಷೇಪಾರ್ಹ" ಹೇಳಿಕೆಯ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ, ತೆಲಂಗಾಣ ಮಾಜಿ ಸಿಎಂಗೆ ಸೂಚಿಸಿದೆ.