ಸಿದ್ದಾಪುರ, ಏ. ೧೮: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಶಾಸಕರೊಂದಿಗೆ, ಸಂಸದರಾಗಿ ಕೆಲಸ ಮಾಡಲು ಸಹಕಾರ ನೀಡಿ ಎಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಮನವಿ ಮಾಡಿದರು. ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ೨೦-೨೫ ವರ್ಷಗಳ ಕಾಲ ಕೊಡಗು ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲೆಯ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ತಲಾ ರೂ. ೨೫೦ ಕೋಟಿ ಅನುದಾನವನ್ನು ಜಿಲ್ಲೆಗೆ ತಂದಿರುವುದು ಸಾಧನೆಯಾಗಿದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ವರ್ಗದವರಿಗೆ ಅನುಕೂಲವಾಗಿವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಅಭಿವೃದ್ಧಿ ಕಾಣದೆ ಇದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಹತ್ತು ತಿಂಗಳಲ್ಲಿ ಸಮಗ್ರ ಅಭಿವೃದ್ಧಿಗೆ ರೂ. ೨೫೦ ಕೋಟಿ ಬಿಡುಗಡೆ ಆಗಿದೆ. ಆದರೆ ಬಿಜೆಪಿ ನಮ್ಮ ಅಭಿವೃದ್ಧಿ, ಗ್ಯಾರಂಟಿ ಕಾರ್ಯಗಳನ್ನು ಸಹಿಸದೆ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ಪಕ್ಷವು ಜಾತಿ, ಧರ್ಮದ ವಿಷಬೀಜ ಬಿತ್ತಿ ಸಮಾಜದಲ್ಲಿ ಪರಸ್ಪರ ದ್ವೇಷವನ್ನು ಬಿತ್ತುವ ಕೆಲಸದಲ್ಲಿ ಮಗ್ನವಾಗಿದೆ ಎಂದು ಆರೋಪಿಸಿದರು.ಈ ಸಂದರ್ಭ ಮಾಜಿ ಎಂಎಲ್ಸಿಗಳಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾ.ಪಂ. ಅಧ್ಯಕ್ಷೆ ಪ್ರೇಮಾಗೋಪಾಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಪೂಣಚ್ಚ ಆರ್.ಕೆ., ಸಲಾಂ, ಪ್ರತೀಶ್ ಎಂ.ಯು. ಮಜೀದ್, ಕೆಪಿಸಿಸಿ ಸದಸ್ಯ ಶಾಂತಪ್ಪ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು, ವಿವಿಧ ಘಟಕದ ವಲಯ ಅಧ್ಯಕ್ಷರುಗಳು ಹಾಗೂ ಇನ್ನಿತರರು ಹಾಜರಿದ್ದರು