ನಾಪೋಕ್ಲು, ಏ. ೧೯: ಬಿಜೆಪಿ ಪಕ್ಷದ ಸಾಧನೆಗಳನ್ನು, ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾದ್ದರಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲುಂಟಾಯಿತು. ಆ ತಪ್ಪು ಮರುಕಳಿಸದಂತೆ ಕಾರ್ಯಕರ್ತರು ಈ ಬಾರಿ ಮತದಾರರನ್ನು ಭೇಟಿಯಾಗಿ ಪಕ್ಷದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.
ಸಮೀಪದ ಬೆಟ್ಟಗೇರಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ದೇಶದ ಎಲ್ಲೆಡೆ ಮೋದಿ ಅಲೆ ಇದೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗುವಂತೆ ಮಾಡಬೇಕಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ತಮ್ಮ ಮತ ನೀಡಿ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಂಗೀರ ಸತೀಶ್, ತಾಲೂಕು ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಎಂ. ಬೋಪಣ್ಣ, ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ , ಮಹಿಳಾ ಮೋರ್ಚಾ ಅಧ್ಯಕ್ಷೆ ಕುಮುದ, ಹೊಸೂರು ಸತೀಶ್ ಕುಮಾರ್, ಕೊಡಪಾಲು ಗಪ್ಪು ಗಣಪತಿ , ಉಮಾ ಪ್ರಭು, ಬೆಟ್ಟಗೇರಿ, ಬೇಂಗೂರು, ಮದೆನಾಡು ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.