ಮಡಿಕೇರಿ, ಏ.೨೦: ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿಸಿ ಮನೋಸ್ಥೆರ್ಯವನ್ನು ಕುಗ್ಗಿಸುವ ಯತ್ನ ರಾಜ್ಯಾವ್ಯಾಪಿ ನಡೆಯುತ್ತಿದ್ದು, ವಾಲ್ನೂರಿನಲ್ಲಿ ನಡೆದ ಅಪಘಾತ ಪ್ರಕರಣ ಇದರ ಒಂದು ಭಾಗವಾಗಿದೆ. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ವಾಲ್ನೂರಿನಲ್ಲಿ ನಡೆದಿರುವುದು ಆಕಸ್ಮಿಕ ಘಟನೆಯಲ್ಲ, ಉದ್ದೇಶಪೂರ್ವಕ ಅಪಘಾತವಾಗಿದೆ ಇದನ್ನು ಪಕ್ಷ ಖಂಡಿಸುತ್ತದೆ ಎಂದರು. ಬಿಜೆಪಿ ಅಪಘಾತ ಪ್ರಕರಣದ ಲಾಭ ಪಡೆಯುತ್ತಿದೆ ಎನ್ನುವ ಮೂಲಕ ಕಾಂಗ್ರೆಸ್ ಈ ರೀತಿಯ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು. ಕೊಡಗು ಜಿಲ್ಲೆಯಲ್ಲಿ ಗಾಂಜಾ ದಂಧೆ ಮಿತಿ ಮೀರಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಬಿಜೆಪಿ ವತಿಯಿಂದ ರೂ.೧೦ ಲಕ್ಷ ಮತ್ತು ಇಬ್ಬರು ಗಾಯಾಳುಗಳಿಗೆ ತಲಾ ೨ಲಕ್ಷ ನೀಡಲು ಪಕ್ಷ ನಿರ್ಧರಿಸಿದೆ ಎಂದೂ ಅವರು ಹೇಳಿದರು. ಉಪಮುಖ್ಯಮಂತ್ರಿಗಳಿಗೆ ಗೌರವ ಸೂಚಿಸಿ ಒಕ್ಕಲಿಗ ಮತ್ತು ಅರೆಭಾಷೆ ಗೌಡರ ಸಭೆಯಲ್ಲಿ ಪಾಲ್ಗೊಂಡಿರುವುದಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಸಮಜಾಯಿಷಿಕೆ ನೀಡಿದ್ದಾರೆ. ಆ ಸಭೆಗೆ ಬಿಜೆಪಿಯಲ್ಲಿದ್ದ ಗೌಡರನ್ನು, ಸುಳ್ಯ, ಕರಿಕೆ ಭಾಗದ ಗೌಡರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಅವರು ಪ್ರಶ್ನಿಸಿದರು.
ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣವಿರುವಾಗ ಜನರ ದೃಷ್ಟಿಯನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಈ ರೀತಿಯ ಅಶಾಂತಿಯ ವಾತಾವರಣವನ್ನು ಸೃಷ್ಟಿಸುತ್ತದೆ. ಬಿಜೆಪಿ ಕಾರ್ಯಕರ್ತರ ಮನೋಸ್ಥೆರ್ಯ ಕುಗ್ಗಿಸಲು ಷಡ್ಯಂತ್ರ ನಡೆಸುತ್ತದೆ. ರಾಜ್ಯದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದರು. ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ರಾಜ್ಯ ಸರಕಾರ ಬಿಟ್ಟಿ ಭಾಗ್ಯಗಳ ಹಿಂದೆ ಬಿದ್ದಿರುವ ಪರಿಣಾಮ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬೆಂಗಳೂರಿನಲ್ಲಿ ಕೊಡಗಿನ ನಟಿ ಹರ್ಷಿಕಾ ಪೂಣಚ್ಚ ಅವರ ಮೇಲೂ ದೌರ್ಜನ್ಯ ನಡೆದಿದೆ ಎಂದೂ ಉಲ್ಲೇಖಿಸಿದರು.
ಮತ್ತೊಬ್ಬ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಮಾತನಾಡಿ, ಅಪಘಾತ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರನ್ನೂ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಈ ರೀತಿಯ ಘಟನೆಗಳು ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯ ವ್ಯಾಪಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಉನ್ನತ ಮಟ್ಟದ ತನಿಖೆ ನಡೆಸುವ ಅಗತ್ಯವಿದೆ ಎಂದರು.
ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಹಾಗೂ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ರಾಜ್ಯ ಸರಕಾರ ಮಹಿಳೆಯರಿಗೆ ಭದ್ರತೆ ನೀಡಬೇಕು, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ ಎಂದು ಆರೋಪಿಸಿದರು.