ಮಡಿಕೇರಿ, ಏ. ೨೭: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ೧೯೬೨ ರಿಂದ ೨೦೧೯ ರವರೆಗೆ ಮತದಾನ ಪ್ರಮಾಣ ಶೇ. ೬೫ರ ಆಸುಪಾಸಿನಲ್ಲಿ ಇತ್ತು.

೨೦೧೯ರ ಲೋಕಸಭಾ ಚುನಾವಣೆಯಲ್ಲಿ ಶೇ. ೬೯.೫೧ ರಷ್ಟು ಮತ ಚಲಾವಣೆಯಾಗಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕೊನೆಗೂ ಮತದಾನ ಪ್ರಮಾಣ ೭೦ರ ಗಟಿದಾಟಿಯೇ ಬಿಟ್ಟಿದೆ.

ಶೇ. ೭೦.೬೨ ಮತ ಚಲಾವಣೆಯಾಗುವುದರ ಮೂಲಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಮತದಾನ ಈ ಬಾರಿ ಹೊಸ ದಾಖಲೆ ಬರೆದಿದೆ. ೨೦೧೯ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣ ಶೇ. ೧.೬೨ ರಷ್ಟು ಹೆಚ್ಚಳವಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರವಾರು ಚಲಾವಣೆಯಾದ ಮತದಾನ ಪ್ರಮಾಣದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತ ಪ್ರಮಾಣಕ್ಕಿಂತ ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣ ಕಡಿಮೆಯಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. ೭೫.೪೧ ರಷ್ಟು ಮತ ಚಲಾವಣೆಯಾಗಿದೆ. ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಶೇ. ೭೬.೫೫ ರಷ್ಟು ಮತ ಚಲಾವಣೆಯಾಗಿತ್ತು.

ಕಾಂಗ್ರೆಸ್ ಶಾಸಕ ಡಾ. ಮಂತರ್ ಗೌಡ ಪ್ರತಿನಿಧಿಸುತ್ತಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೭೫.೩೯ ರಷ್ಟು ಮತ ಚಲಾವಣೆಯಾಗಿತ್ತು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೭೩.೮೮ ರಷ್ಟು ಮತದಾನ ಪ್ರಮಾಣ ದಾಖಲಾಗಿದೆ.

ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿನಿಧಿ ಸುತ್ತಿರುವ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೭೪.೦೭ ರಷ್ಟು ಮತದಾನವಾಗಿತ್ತು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೮೦.೧೯ ರಷ್ಟು ಮತದಾನವಾಗಿದೆ.

೨೦೧೯ರ ಲೋಕಸಭಾ ಚುನಾವಣೆಯಲ್ಲಿ ಶೇ. ೭೮.೮೯ ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ ಶಾಸಕ ಮತ್ತು ಸಚಿವರಾದ ಕೆ. ವೆಂಕಟೇಶ್ ಪ್ರತಿನಿಧಿಸುತ್ತಿರುವ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ೨೦೨೩ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇ. ೮೪.೪೨ ಮತದಾನವಾಗಿತ್ತು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೭೩.೪೦ ಮತದಾನವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. ೭೧.೬೮ ಮತದಾನಾಗಿತ್ತು. ಜೆಡಿಎಸ್ ಶಾಸಕ ಜಿ.ಟಿ. ದೇವಗೌಡ ಶಾಸಕರಾಗಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೭೪.೦೫ ರಷ್ಟು ಮತದಾನವಾಗಿತ್ತು.

ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ೨೦೨೪ರ ಲೋಕಸಭಾ ಚುನಾವಣೆ ಯಲ್ಲಿ ಶೇ. ೭೭.೯೧ ರಷ್ಟು ಮತದಾನವಾಗಿದೆ. ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. ೭೭.೮೬ ರಷ್ಟು ಮತದಾನವಾಗಿತ್ತು.

ಜೆಡಿಎಸ್ ಶಾಸಕ ಹರೀಶ್ ಗೌಡ ಶಾಸಕರಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೮೨.೧೬ ರಷ್ಟು ಮತದಾನವಾಗಿತ್ತು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೬೫.೫೫ ರಷ್ಟು ಮತದಾನವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಕೇವಲ ಶೇ. ೬೦.೬೦ ರಷ್ಟು ಮತದಾನವಾಗಿತ್ತು.

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪ್ರತಿನಿಧಿಸುತ್ತಿರುವ ನರಸಿಂಹರಾಜ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೬೩.೪೪ ರಷ್ಟು ಮತದಾನವಾಗಿತ್ತು.

ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೬೦.೯೮ ರಷ್ಟು ಮತದಾನವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ಪ್ರಮಾಣ ದಾಖಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಶೇ. ೫೯.೯೩ ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ ಶಾಸಕ ಹರೀಶ್ ಗೌಡ ಪ್ರತಿನಿಧಿಸುತ್ತಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ. ೬೧.೨೨ ರಷ್ಟು ಮತದಾನವಾಗಿತ್ತು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ೬೦.೮೭ ರಷ್ಟು ಮತದಾನವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಶೇ. ೬೦.೩೯ ರಷ್ಟು ಮತದಾನವಾಗಿತ್ತು.

ಬಿಜೆಪಿಯ ಏಕೈಕ ಶಾಸಕ ಶ್ರೀವತ್ಸ ಪ್ರತಿನಿಧಿಸುತ್ತಿರುವ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಶೇ. ೫೯.೪೩ ರಷ್ಟು ಮತದಾನವಾಗಿತ್ತು.

- ಕೆ.ಎಂ. ಇಸ್ಮಾಯಿಲ್ ಕಂಡಕರೆ