ನವದೆಹಲಿ, ಏ. ೨೭: ಕರ್ನಾಟಕಕ್ಕೆ ರೂ. ೩,೪೫೪ ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ವಾಗ್ದಾನ ನೀಡಿತ್ತು.
ಕೋರ್ಟ್ನಲ್ಲಿ ವಿಚಾರಣೆ ಕಾಲಕ್ಕೆ, ‘ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ' ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.
(ಮೊದಲ ಪುಟದಿಂದ) ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದನ ಸಿಗದೇ ಇದ್ದುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಬರಪರಿಹಾರ, ತೆರಿಗೆ ನ್ಯಾಯಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆಯನ್ನೂ ಸರ್ಕಾರ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದ್ದಕ್ಕೆ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿತ್ತು. ಬಳಿಕವೂ 'ಸಂಘರ್ಷ' ಮುಂದುವರಿದಿತ್ತು.
ಬಾಕಿ ಅನುದಾನಕ್ಕಾಗಿ ಹೋರಾಟ - ಸಿದ್ದರಾಮಯ್ಯ
ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ‘ಎಕ್ಸ್’ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಎನ್ಡಿಆರ್ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.೧೮,೧೭೧ ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. ೩೪೯೮.೯೮ ಕೋಟಿ ನೀಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ಗೆ ರಾಜಕೀಯ ಕಾರಣದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ ಎಂದು ವ್ಯಾಖ್ಯಾನಿಸಿದ್ದಾರೆ.
ರಾಜ್ಯದ ೨೨೩ ತಾಲೂಕುಗಳನ್ನು ಬರಪೀಡಿತ ಎಂದು ನಾವು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. ೪೮ ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ೩೫,೧೬೨ ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.೧೮,೧೭೧ ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿAದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ.೩೪೯೮.೯೮ ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕೇಂದ್ರ ಸರಕಾರ ಹಣ ಬಿಡುಗಡೆ ಮಾಡಿರುವುದನ್ನು ಸ್ವಾಗತಿಸಿದ್ದಾರೆ. ರಾಜ್ಯ ಸರಕಾರವು ರಾಜಕೀಯ ಮಾಡುವುದನ್ನು ಬಿಟ್ಟು ಈ ಹಣವನ್ನು ದುರ್ಬಳಕೆ ಮಾಡದೆ ಸದುಪಯೋಗಗೊಳಿಸುವಂತೆ ಅವರು ಸಲಹೆಯಿತ್ತಿದ್ದಾರೆ.