ರಾಯ್ ಬರೇಲಿಯಿಂದ ರಾಹುಲ್ ಸ್ಪರ್ಧೆ-ನಾಮಪತ್ರ ಸಲ್ಲಿಕೆ

ಲಖನೌ, ಮೇ ೩: ಕೊನೆಗೂ ಕಾಂಗ್ರೆಸ್ ಎಲ್ಲ ಕುತೂಹಲಗಳಿಗೆ ತೆರೆ ಎಳೆದಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆ. ಶುಕ್ರವಾರ ರಾಹುಲ್ ಗಾಂಧಿ ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಆಗಮಿಸಿದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು. ಈ ಹಿಂದೆ ರಾಹುಲ್ ಗಾಂಧಿ ಅಮೇಠಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಮೇಠಿ ಬದಲಿಗೆ ರಾಯ್ ಬರೇಲಿಯಿಂದ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಹೆಚ್.ಡಿ. ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು, ಮೇ ೩: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಬಿಡುಗಡೆಯಾದ ಅಶ್ಲೀಲ ವೀಡಿಯೋದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಅಶ್ಲೀಲ ವೀಡಿಯೋ ವಿವಾದದಲ್ಲಿ ತÀನ್ನ ತಾಯಿಯ ಚಿತ್ರವೂ ಇದೆ. ವೀಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಹೆಚ್.ಡಿ. ರೇವಣ್ಣ ವಿರುದ್ಧ ಸೆಕ್ಷನ್ ೩೬೪/ಂ ೩೬೫ ಹಾಗೂ ೩೪ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ ೧ ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ ೨ ಎಂದೂ ನಮೂದಿಸಲಾಗಿದೆ. ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆ.ಆರ್. ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ಬೆಂಗಳೂರು, ಮೇ ೩: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಾಸಕ ಹೆಚ್.ಡಿ. ರೇವಣ್ಣ ಪರ ವಕೀಲರು ವಾಪಸು ಪಡೆದಿದ್ದಾರೆ. ಈ ಕುರಿತಂತೆ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ (ಸಿಸಿಎಚ್-೮೨) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶುಕ್ರವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಎಸ್‌ಐಟಿ ಪರ ಹಾಜರಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್, ಹೆಚ್.ಡಿ. ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆ-೧೮೬೦ರ ಕಲಂ ೩೭೬ (ಅತ್ಯಾಚಾರ ಆರೋಪ) ಅನ್ನು ಸೇರ್ಪಡೆ ಮಾಡಿಲ್ಲ. ಅತ್ಯಾಚಾರದ ಆರೋಪ ಇಲ್ಲದಿರುವ ಕಾರಣ ನಿರೀಕ್ಷಣಾ ಜಾಮೀನು ಕೋರಿಕೆಯ ಅರ್ಜಿ ವಿಚಾರಣೆ ಅಗತ್ಯವಿಲ್ಲ. ಆರೋಪಿಗೆ ಜಾಮೀನು ನೀಡಬಹುದಾದ ಆರೋಪಗಳು ಮಾತ್ರವಿವೆೆ ಎಂದರು. ಎಸ್‌ಐಟಿಯ ಈ ಹೇಳಿಕೆ ಹಿನ್ನೆಲೆಯಲ್ಲಿ ಹೆಚ್.ಡಿ. ರೇವಣ್ಣ ಪರ ಹಾಜರಿದ್ದ ಹೈಕೋರ್ಟ್ ಹಿರಿಯ ವಕೀಲ ಮೂರ್ತಿ ಡಿ. ನಾಯಕ್ ಅವರು ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿಯನ್ನು ವಾಪಸು ಪಡೆದರು. ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.

ಹಿಂದೂ ಕಾರ್ಯಕರ್ತರ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳಗಾವಿ, ಮೇ ೩: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಸಾವಿನ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ರಾಜು ಕಾಗೆ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರಿಗೆ ‘ಬಿಕಾರ್‌ಚೋಟ್ ಅಂದ್ರೆ ಗತಿ ಇಲ್ಲದ ಭಿಕ್ಷುಕರು’ ಎಂದು ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ನಡೆಸಿ ಮಾತನಾಡಿದ ಕಾಗೆ, ರಾಮಮಂದಿರ ನಿರ್ಮಾಣದಿಂದ ದೇಶದ ಜನತೆ ಸಮಸ್ಯೆಗಳಿಂದ ಮುಕ್ತಿ ಹೊಂದಲು ಸಾಧ್ಯವಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದರೆ ನಾವೂ ದೇವಸ್ಥಾನಗಳನ್ನು ನಿರ್ಮಿಸುತ್ತೇವೆ. ಬಿಜೆಪಿ ಕಾರ್ಯಕರ್ತರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಲು ಮಾತ್ರ ಗೊತ್ತು. ನಾನು ಇದನ್ನೆಲ್ಲ ೪೦ ವರ್ಷಗಳ ಹಿಂದೆ ಮಾಡಿದ್ದೇನೆ. ನಾನು ಅವರಿಗೆ ಉತ್ತರಿಸಲು ಸಿದ್ಧ ಮತ್ತು ಸಮರ್ಥನಾಗಿದ್ದೇನೆ. ಆದರೆ ಅದು ನನ್ನ ಮಟ್ಟದಲ್ಲಿಲ್ಲ. ಅವರು ಬಿಕಾರ್ ಜೋಟ್‌ಗಳು, ಹೀಗಾಗಿ ಜನರು ಅಭಿವೃದ್ಧಿ ಬೇಕಾದರೆ ಕಾಂಗ್ರೆಸ್‌ಗೆ ಮತ ಹಾಕಬೇಕು ಎಂದಿದ್ದಾರೆ.