ಕೂಡಿಗೆ, ಮೇ ೫: ಕುಶಾಲನಗರ ತಾಲೂಕು ತಹಶೀಲ್ದಾರ್ ನೇತೃತ್ವದ ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳ ಆಧ್ಯತೆಯ ಅಧಾರದ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಂದಾಯ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿದೆ.
ಈಗಾಗಲೇ ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತದಿಂದಾಗಿ ಕೊಳವೆ ಬಾವಿಗಳ ನೀರಿನ ಮಟ್ಟದಲ್ಲಿ ಬಾರಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಟ್ಯಾಂಕರ್ ಮೂಲಕ ಆಯಾ ಗ್ರಾಮಗಳಿಗೆ ಕುಡಿಯುವ ನೀರನ್ನು ವಿತರಣೆ ಮಾಡಲಾಗುತ್ತಿದೆ.
ಕೂಡುಮಂಗಳೂರು, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಮನವಿಯ ಮೇರೆಗೆ ಆಯಾ ಗ್ರಾಮ ಪಂಚಾಯಿತಿಗಳಿಗೆ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.
ಇದೇ ರೀತಿಯಲ್ಲಿ ಕೊಡಗಿನ ಗಡಿಭಾಗವಾದ ಶಿರಂಗಾಲ ಗ್ರಾಮ ಪಂಚಾಯತಿ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಕುಡಿಯುವ ಸಮಸ್ಯೆ ಕಂಡುಬAದ ಹಿನ್ನೆಲೆಯಲ್ಲಿ ನೀರಿನ ವ್ಯವಸ್ಥೆಯನ್ನು ತಾಲ್ಲೂಕು ಟಾಸ್ಕ್ ಫೋರ್ಸ್ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಉಪಗ್ರಾಮಗಳಿಗೆ ವಿತರಣೆ ಮಾಡಲಾಗುತ್ತಿದೆ. ಶಿರಂಗಾಲ ಗ್ರಾಮ ಪಂಚಾಯಿತಿ ಮನವಿ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಮತ್ತು ಸಿಬ್ಬಂದಿ ವರ್ಗದವರು ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ಮತ್ತು ಮಾಹಿತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಕಂದಾಯ ಪರಿವೀಕ್ಷಕ ಸಂತೋಷ್, ಶಿರಂಗಾಲ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಸಿ. ರವಿ. ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು. -ಕೆ. ಕೆ. ನಾಗರಾಜಶೆಟ್ಟಿ