ಎಸ್. ಬಿ. ಅಪ್ಪಾಜಿಗೌಡ
ನಾಪೋಕ್ಲು, ಜೂ. ೧೬: ಉತ್ತಮ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್.ಬಿ. ಅಪ್ಪಾಜಿಗೌಡ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸದೃಢ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. ಹಿರಿಯರಿಗೆ, ಸಮಾಜಕ್ಕೆ ಒಳ್ಳೆಯ ಹೆಸರನ್ನು ತರುವಂತಾಗಬೇಕು ಎಂದರು. ಕೊಡಗು ವೈದ್ಯಕೀಯ ಕಾಲೇಜಿನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಮೇರಿ ಚಿಟ್ಟಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ರೂಢಿಸಿಕೊಂಡು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾಯಕತ್ವದ ಗುಣಗಳನ್ನು ಬಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಿದರೆ ಮಾತ್ರ ಕಾಲೇಜು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಇದಕ್ಕೂ ಮುನ್ನ ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ಅಪ್ಪಾಜಿಗೌಡ ಗಿಡ ನೆಟ್ಟು ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮಾವತಿ ಮುಕ್ಕಾಟಿರ, ಪದ್ಮಾ ಗಣಪತಿ, ರಾಜು ದೇವಯ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಂಚಾಲಕ ಎಲ್.ಸಿ. ರಂಗಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಶಿವರಾಜ್ ಕುಮಾರ್ ಕೆ.ಎಸ್., ಸಹಾಯಕ ಪ್ರಾಧ್ಯಾಪಕ ಮನೋಜ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿ ಮೊಹಮ್ಮದ್ ಶಮಿಮ್, ಕೆ.ಹೆಚ್. ನಿಷ್ಮ, ಎಂ.ವಿ. ಇರ್ಫಾನ್, ಎಂ.ಐ. ರಕ್ಷತಾ, ಬಿ.ಪಿ. ನಿತಿನ್, ಕೀರ್ತಿ ಎಂ.ವಿ. ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ವೇತ ಮತ್ತು ಲುಕ್ಕಿಮಣಿ ಪ್ರಾರ್ಥಿಸಿ ಕನ್ನಡ ಪ್ರಾಧ್ಯಾಪಕಿ ಹರಿಣಿ ಕಾಲೇಜಿನ ವರದಿ ವಾಚಿಸಿದರು. ಉಪನ್ಯಾಸಕ ವೇಣು ಗೋಪಾಲ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ರಂಗಸ್ವಾಮಿ ಎಲ್.ಸಿ. ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.