ಮಡಿಕೇರಿ, ಜೂ. ೧೬: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಹಾಗೂ ಕರಿನೆರವಂಡ ಬಿದ್ದಪ್ಪ ಆಗಮಿಸಿದ್ದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಇಂದಿನ ಯುವಜನಾಂಗಕ್ಕೆ ಅಗತ್ಯವಿರುವ ಸೌಲಭ್ಯಗಳು ಮತ್ತು ಅದರ ಸದುಪಯೋಗವನ್ನು ಪಡೆದುಕೊಳ್ಳುವ ಬಗ್ಗೆ ತಿಳಿಸಿಕೊಟ್ಟರು.
ಕರಿನೆರವಂಡ ಬಿದ್ದಪ್ಪ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿದಾಗ ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಯುತವಾಗಿ ಇರಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ ವಹಿಸಿದ್ದರು. ಪ್ರಸಕ್ತ ಸಾಲಿನ ಕಾಲೇಜಿನ ಸಾಧನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಕಾಲೇಜಿನಲ್ಲಿ ಮುಂಬರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನ ‘ಅತ್ಯುತ್ತಮ ವಿದ್ಯಾರ್ಥಿ’ ಪ್ರಶಸ್ತಿಯನ್ನು ತೃತೀಯ ಬಿ.ಕಾಂ ವಿದ್ಯಾರ್ಥಿನಿ ವಿಸ್ಮಯ ಪಿ.ವಿ ಅವರಿಗೆ ನೀಡಿ ಗೌರವಿಸ ಲಾಯಿತು. ಇದರೊಂದಿಗೆ ವಿವಿಧ ವಿಷಯಗಳಲ್ಲಿ ೯೫ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನವನ್ನು ವಿತರಿಸಿ, ವಿವಿಧ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿರುವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಬಸವರಾಜು ಕೆ., ಕ್ರೀಡಾ ಮತ್ತು ರೇಂರ್ಸ್ ಸಮಿತಿ ಸಂಚಾಲಕಿ ರಾಖಿ ಪೂವಣ್ಣ ಎಂ, ಕಾಲೇಜಿನ ಐಕ್ಯೂಎಸಿ ಸಂಚಾಲಕ ನಾಗರಾಜಮೂರ್ತಿ ಪಿ.ಎನ್. ಹಾಜರಿದ್ದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ರುದ್ರ ಸ್ವಾಗತಿಸಿ, ಕಾಲೇಜು ವಾರ್ಷಿಕ ವರದಿಯನ್ನು ಡಾ. ಬಸವರಾಜು ಕೆ. ವಾಚಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಧನ್ಯ ನಿರೂಪಿಸಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ರಘುರಾಜು ವಂದಿಸಿದರು.