ಕೂಡಿಗೆ, ಜೂ. ೧೮: ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಭಾರತದ ಸಂಪನ್ಮೂಲ ವ್ಯಕ್ತಿಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಗೈಡ್ಸ್ ಆಯುಕ್ತರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ರಾಣಿ ಮಾಚಯ್ಯ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಪರಿಚಯ ಕುರಿತು ಹಾಗೂ ವಿಶ್ವ ಬಾಲ ಕಾರ್ಮಿಕರ ದಿನಾಚರಣೆಯ ಮಹತ್ವ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ತಾ. ೧೮ ರಿಂದ ೨೪ ರವರೆಗೆ ಮಡಿಕೇರಿ ತಾಲೂಕಿನ ಗಾಳಿಬೀಡು ನವೋದಯ ಶಾಲೆಯಲ್ಲಿ ಶಾಲಾ ಶಿಕ್ಷಕರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಏರ್ಪಡಿಸಿರುವ ತರಬೇತಿ ಕುರಿತು ಮಾಹಿತಿ ನೀಡಿ, ಈ ತರಬೇತಿ ಯಲ್ಲಿ ಶಿಕ್ಷಕರು ಭಾಗವಹಿಸುವ ಮೂಲಕ ಉತ್ತಮ ತರಬೇತಿ ಹೊಂದಬೇಕು ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್, ಗೈಡ್ಸ್ನ ಧ್ಯೇಯೋದ್ದೇಶಗಳನ್ನು ಅರಿತುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮಾತನಾಡಿ, ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತವಾಗದೆ ಉತ್ತಮ ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಗೈಡ್ಸ್ ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಸೇರಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ನಿಲಯ ಪಾಲಕ ಜಗದೀಶ್, ಶಾಲೆಯ ಶಿಕ್ಷಕರಾದ ಎಸ್.ಕೆ. ಚಿದಂಬರ, ನಾಗೇಂದ್ರ, ಹೆಚ್.ಬಿ. ದಿನೇಶಾಚಾರಿ, ಗಾನವಿ, ಹರಿಣಾಕ್ಷಿ ಇತರರು ಇದ್ದರು. ಇದೇ ವೇಳೆಯಲ್ಲಿ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ ಹಾಗೂ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಶಾಲಾವರಣದಲ್ಲಿ ಪರಿಸರ ಸಂಭ್ರಮದ ಅಂಗವಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಗಿಡ ನೆಟ್ಟರು. ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.