ಸಿದ್ದಾಪುರ, ಜೂ. ೧೮: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ನೆಲ್ಯಹುದಿಕೇರಿ ಸಿಪಿಐಎಂ ಪಕ್ಷದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಮುಖಂಡ ಪಿ.ಆರ್. ಭರತ್ ಮಾತನಾಡಿ, ರಾಜ್ಯದಲ್ಲಿ ದಿಢೀರನೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದ್ದು, ದಿನ ಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೇರಿದೆ. ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೂಡಲೇ ಏರಿಕೆ ಮಾಡಿರುವ ಬೆಲೆಯನ್ನು ಕಡಿಮೆ ಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪ್ರಮುಖರಾದ ಉದಯ್ ಕುಮಾರ್, ಮುಸ್ತಫ, ಚಂದ್ರನ್ ಇನ್ನಿತರರು ಪಾಲ್ಗೊಂಡಿದ್ದರು.