ಮುಳ್ಳೂರು, ಜೂ. ೧೮ : ವಿದ್ಯಾಭ್ಯಾಸದ ಮೂಲಕ ಏನೂ ಬೇಕಾದರೂ ಸಾಧನೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ಶಿಕ್ಷಣದ ಬಗ್ಗೆ ಶ್ರದ್ಧೆ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಳ್ಳಿ ಎಂದು ಸಮೀಪದ ಕೊಡ್ಲಿಪೇಟೆ ಕ್ಯಾತೆ ಗ್ರಾಮದಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಆಂಗ್ಲ ಮಾಧ್ಯಮ ವಸತಿ ಶಾಲೆಯ ಉಪನ್ಯಾಸಕ ಡಿ.ಪಿ.ಸತೀಶ್ ಹೇಳಿದರು.

ಅವರು ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ೨೦೨೩-೨೪ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡುತ್ತಿದ್ದರು. ಶಿಕ್ಷಣದಿಂದ ಸಾಧನೆ ಮಾಡಲು ಸಾಧ್ಯವಿದ್ದರೂ ಇಂದಿನ ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣದಲ್ಲಿ ತಲ್ಲೀನರಾಗುತ್ತಿದ್ದು, ಶಿಕ್ಷಣದತ್ತ ಗಮನಹರಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ಕಷ್ಟವಾಗುತ್ತದೆ. ವಿದ್ಯಾಭ್ಯಾಸದ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಬಗ್ಗೆ ಶ್ರದ್ಧೆ, ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಅಗತ್ಯಕ್ಕಾಗಿ ಮಾತ್ರ ಮೊಬೈಲ್ ಅನ್ನು ಬಳಕೆ ಮಾಡಬೇಕು, ಸಾಮಾಜಿಕ ಜಾಲತಾಣದಿಂದ ದೂರ ಇರುವುದರ ಜೊತೆಯಲ್ಲಿ ದುಶ್ಚಟಗಳಿಂದಲೂ ದೂರ ಇದ್ದು ಶಿಕ್ಷಣವನ್ನು ತನ್ನ ಗುರಿಯನ್ನಾಗಿಸಿಕೊಳ್ಳುವುದರಿಂದ ಉತ್ತಮ ವಿದ್ಯಾರ್ಥಿಯಾಗಿ ಮತ್ತು ವಿದ್ಯಾವಂತನಾಗಿ ಹೊರ ಹೊಮ್ಮುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಯಲ್ಲಿ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳುವುದರಿಂದ, ಶಿಕ್ಷಣ ಪೂರೈಸಿದ ನಂತರ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಶ್ರದ್ಧಾ-ಭಕ್ತಿಯಿಂದ ಓದಿನ ಕಡೆ ಗಮನ ಹರಿಸುವಂತೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿದರು. ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ವಿದ್ಯಾಸಂಸ್ಥೆ ನಿರ್ದೇಶಕರಾದ ಯತೀಶ್, ಶಿವಪ್ರಸಾದ್, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಜಗದೀಶ್ ಬಾಬು, ಪ.ಪೂ. ಕಾಲೇಜಿನ ಪ್ರಾಂಶುಪಾಲ ಪವಾರ್, ಫ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಕಾಲೇಜು ಉಪನ್ಯಾಸಕರು, ಶಿಕ್ಷಕರು ಹಾಜರಿದ್ದರು.