ಸುಂಟಿಕೊಪ್ಪ, ಜೂ. ೧೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯಕ್ಕೆ ಆಗುವ ದುಷ್ಪಾರಿಣಾಮಗಳ ಕುರಿತು ಆರೋಗ್ಯ ಇಲಾಖೆಯವರಿಂದ ಮಾಹಿತಿಯ ಕಾರ್ಯಾಗಾರವನ್ನು ನಡೆಸಲಾಯಿತು. ಸಂಘದ ಸದಸ್ಯರಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮತ್ತು ಚಿಕನ್ಗುನ್ಯ, ಡೆಂಗ್ಯೂ ರೋಗಗಳ ಮಾಹಿತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ನಿರೀಕ್ಷಕ ಲೋಕೇಶ್ ತಿಳಿಸಿದರು. ಚಿಕುನ್ಗುನ್ಯ ಹಾಗೂ ಡೆಂಗ್ಯೂ ಕಾಯಿಲೆಗಳು ಹರಡುವ ಬಗ್ಗೆ ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಮತ್ತು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಡಿ. ನರಸಿಂಹ ಅವರು ಮಾತನಾಡಿ, ತಂಬಾಕು ಸೇವನೆ ಹಾಗೂ ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ವಲಯದ ಮೇಲ್ವಿಚಾರಕರು ಸಂಘದ ವಾರದ ಸಭೆಯ ಮಹತ್ವ ಮತ್ತು ವಿನಿಯೋಗದಾರರ ಬದಲಾವಣೆ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ದಾಖಲಾತಿ ಸಮಿತಿ, ಉಪಸಮಿತಿ, ಸೇವಾ ಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.