ಮಡಿಕೇರಿ, ಜೂ. ೧೯: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಮೊನ್ನೆ ದಿನ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದ್ದು, ಮತ್ತೊಂದು ಹಂತದ ಹೋರಾಟವಾಗಿ ತಾ.೨೦ರಂದು (ಇಂದು) ವೀರಾಜಪೇಟೆ ಹಾಗೂ ಸೋಮವಾರಪೇಟೆಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಇಂಧನ ಬೆಲೆ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರೂ ಕೂಡ ಸರ್ಕಾರ ಬಿಜೆಪಿಯ ಪ್ರತಿಭಟನೆಗೆ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಸ್ತೆ ತಡೆ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಾಹನ ಚಾಲಕರು, ಸಾರ್ವಜನಿಕರ ಸಹಕಾರದೊಂದಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸರ್ಕಾರ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕೆಂದು ರವಿ ಕಾಳಪ್ಪ ಆಗ್ರಹಿಸಿದರು. ಉತ್ತಮ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ರವಿಕಾಳಪ್ಪ ಬಿಜೆಪಿ ಸಾಮಾನ್ಯ ಜನತೆಯ ಪರವಾಗಿ ಧ್ವನಿ ಎತ್ತಲಿದೆ ಎಂದರು. ಬಿಜೆಪಿಯ ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಬಂದ್ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟವನ್ನು ಕೂಡ ರೂಪಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಕೊಲೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆಗೆ ಭ್ರಷ್ಟ ವ್ಯವಸ್ಥೆಯೆ ಕಾರಣವಾಗಿದೆ. ಆದ್ದರಿಂದ ಸಿಎಂ, ಡಿಸಿಎಂ ಸೇರಿದಂತೆ ಎಲ್ಲರೂ ರಾಜೀನಾಮೆ ನೀಡುವಂತೆ ರವಿಕಾಳಪ್ಪ ಒತ್ತಾಯಿಸಿದ್ದಾರೆ.
ತಾ.೨೧ ರಂದು ಯೋಗ ದಿನಾಚರಣೆಯನ್ನು ಬಿಜೆಪಿ ವತಿಯಿಂದ ಎಲ್ಲಾ ತಾಲೂಕುಗಳಲ್ಲೂ ಆಚರಿಸಲಾಗುವುದು ಎಂದು ರವಿಕಾಳಪ್ಪ ತಿಳಿಸಿದರು. ವೀರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರಿಗೆ ರೂ. ೨ ಸಾವಿರ ನೀಡಿದಂತೆ ಮಾಡಿ ಬೆಲೆ ಏರಿಕೆ ಮೂಲಕ ಮತ್ತೆ ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು. ತಾ.೨೦ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ವೀರಾಜಪೇಟೆ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಮುಖ್ಯ ರಸ್ತೆಗಳನ್ನು ಬಂದ್ ಮಾಡಲಾಗುವುದೆಂದರು. ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಮಾತನಾಡಿ, ಬೆಳಿಗ್ಗೆ ೧೦.೩೦ ಗಂಟೆಗೆ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಪುಟ್ಟಪ್ಪ ವೃತ್ತಕ್ಕೆ ತೆರಳಿ ಮೂರು ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ನಗರ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.