ಮಡಿಕೇರಿ, ಜೂ. ೧೯: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.

ವೀರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ.

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ಜನರಿಗೆ ತಲುಪಿಸಿದಲ್ಲಿ ಸಾರ್ಥಕವಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರ ಶ್ರೇಯೋಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವತ್ತ ಗಮನ ಹರಿಸಬೇಕು. ಸರ್ಕಾರ ಎಲ್ಲಾ ಜನರ ಏಳಿಗೆಗೆ ಒಂದಲ್ಲ ಒಂದು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಯಾರೂ ಸಹ ಮುಖ್ಯವಾಹಿನಿಯಿಂದ ದೂರ ಇರಬಾರದು. ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು ಎಂದರು.

ಇದೇ ಸಂದರ್ಭ ಕಂದಾಯ ಇಲಾಖೆಯ ವತಿಯಿಂದ ಅಗತ್ಯ ಫಲಾನು ಭವಿಗಳಿಗೆ ಪಿಂಚಣಿ ಪತ್ರ ವಿತರಿಸಲಾಯಿತು. ನೆಹರು ನಗರದಲ್ಲಿ ಕುಡಿಯುವ ನೀರು ವಿತರಣಾ ಕೇಂದ್ರ ನಿರ್ಮಿಸಲು ಜಾಗ ನೀಡಿದ ಈ ಖಾಸಿಂ ಉಲ್ ಉಲಾಮ ಮದರಸದ ಅಧ್ಯಕ್ಷ ಅಸ್ಗರ್ ಹುಸೇನ್, ಸಮಿತಿ ಸದಸ್ಯರಾದ ರೌಫ್, ರಫೀಕ್ ಅವರುಗಳನ್ನು ಸನ್ಮಾನಿಸಲಾಯಿತು.

(ಮೊದಲ ಪುಟದಿಂದ) ಜಿ.ಪಂ. ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಅಧ್ಯಕ್ಷ ಧರ್ಮಜ ಉತ್ತಪ್ಪ, ವೀರಾಜಪೇಟೆ ಪುರಸಭೆ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.