ಕೂಡಿಗೆ, ಜೂ ೨೦: ಸರಕಾರಿ ಶಾಲೆಗಳ ಬಲವರ್ಧನೆಗೆ ಆಂಗ್ಲ ಮಾಧ್ಯಮ ಶಾಲೆಗಳ ಸಂಯೋಜನೆ ಅಗತ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಅವರು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಶಾಲೆಗಾಗಿ ರೂ. ೫೧,೬೦೦ ವೆಚ್ಚದಲ್ಲಿ ಅಳವಡಿಸಲಾದ ಸಿ.ಸಿ ಕ್ಯಾಮೆರಾವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಶೈಕ್ಷಣಿಕ ವರ್ಷದಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಮೂರು ಶಾಲೆಗಳಿಗೆ ಒಂದನೇ ತರಗತಿಯಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದರು.
ನಂತರ ಜಿಲ್ಲಾ ಪಂಚಾಯತ್ ಅನುದಾನದಿಂದ ೧ ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡ ಗಂಡು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಿ, ಶಾಲಾ ಮಕ್ಕಳು ಸ್ವಚ್ಛತೆಯನ್ನು ಕಾಪಾಡಿಕೊಂಡು ಶೌಚಾಲಯವನ್ನು ಬಳಸಿಕೊಳ್ಳಬೇಕು ಎಂದರು. ಹಾಗೆ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಮಕ್ಕಳೊಂದಿಗೆ ಸಂಭ್ರಮಿಸಿದರು. ಮುಂದಿನ ದಿನಗಳಲ್ಲಿ ಹೆಬ್ಬಾಲೆ ಶಾಲಾ ಮೈದಾನದಲ್ಲಿ ಕ್ರೀಡಾಕೂಟಗಳನ್ನು ವೀಕ್ಷಿಸಲು ಗ್ಯಾಲರಿ ನಿರ್ಮಿಸಲು ಅನುದಾನ ನೀಡುವುದಾಗಿ ಭರವಸೆಯಿತ್ತರು.
ಜುಲೈ ೧ ರಿಂದಲೇ ಹೆಬ್ಬಾಲೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರನ್ನು ನೇಮಕ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿ.ಪಿ. ಶಶಿಧರ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಕುಮಾರಿ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶೇಖರ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಎಚ್.ಟಿ. ದಿನೇಶ್, ಶ್ಯಾಮ್, ಮಹೇಶ್, ನವೀನ, ಸದಸ್ಯರಾದ ಪರಮೇಶ್, ಚಂದ್ರಶೇಖರ ಜೋಗಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಪ್ರದೀಪ್ ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ನಿವೃತ್ತ ಶಿಕ್ಷಕ ರಮೇಶ್, ಶಾಲಾ ಮುಖ್ಯ ಶಿಕ್ಷಕ ಎಚ್.ಎಮ್. ವೆಂಕಟೇಶ್, ಸಹ ಶಿಕ್ಷಕರಾದ ಜಾನಕಿ, ಬಬಿತಾ, ಪುಷ್ಪಾವತಿ, ರಮ್ಯಾ ಮತ್ತು ಶಿವಾನಂದ, ಗ್ರಾಮಸ್ಥರು ಎಸ್ಡಿಎಂಸಿ ಸದಸ್ಯರು ಮತ್ತು ಶಾಲಾ ಮಕ್ಕಳು ಹಾಜರಿದ್ದರು.