ಸೋಮವಾರಪೇಟೆ, ಜೂ. ೨೧: ಸಮೀಪದ ಮಸಗೋಡು ಗ್ರಾಮ ವ್ಯಾಪ್ತಿಯ ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ ತರಗತಿಗಳನ್ನು ಆರಂಭಿಸಲಾಗಿದ್ದು, ಶಾಸಕ ಡಾ. ಮಂತರ್ ಗೌಡ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ತಾಲೂಕು ವ್ಯಾಪ್ತಿಯ ಹಲವಷ್ಟು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಈ ಎಲ್ಲಾ ಶಾಲೆಗಳಿಗೆ ತಾನು ವೈಯಕ್ತಿಕವಾಗಿ ಪಾಠೋಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಇದರೊಂದಿಗೆ ತಣ್ಣೀರುಹಳ್ಳ ಸರ್ಕಾರಿ ಶಾಲೆಗೆ ಹೆಚ್ಚುವರಿ ೨ ಕೊಠಡಿಗಳ ಅವಶ್ಯಕತೆಯಿದ್ದು, ಶೀಘ್ರದಲ್ಲೇ ಅನುದಾನ ಒದಗಿಸಲಾಗುವುದು ಎಂದರು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸ್ನೇಹಮಯವಾಗಿ ಕೆಲಸ ಮಾಡಿದಲ್ಲಿ ಮಾತ್ರ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಯಾರಿಂದಲೂ ಕದಿಯಲಾಗದ ಆಸ್ತಿ ಎಂದರೆ ಶಿಕ್ಷಣ. ಉತ್ತಮ ಶಿಕ್ಷಣ ಪಡೆದಲ್ಲಿ ಮಾತ್ರ ನಮ್ಮ ಬದುಕಿನಲ್ಲಿ ಬದಲಾವಣೆ ಕಾಣಬಹುದು. ಶಾಲೆಗಳಲ್ಲಿ ಒಳ್ಳೆಯ ಶಿಕ್ಷಣ ನೀಡುವುದರೊಂದಿಗೆ ಖಾಸಗಿ ವಿದ್ಯಾಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಶಿಕ್ಷಕರು ಕೆಲಸ ಮಾಡಬೇಕೆಂದರು.

ಬಿಇಓ ಭಾಗ್ಯಮ್ಮ ಮಾತನಾಡಿ, ಇಂದು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭದ ಅನಿವಾರ್ಯತೆಯಿಂದ ದಾನಿಗಳು ಹಾಗೂ ಶಾಲಾಭಿವೃದ್ಧಿ ಸಹಕಾರದೊಂದಿಗೆ ತಾಲೂಕಿನ ೮ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿಯನ್ನು ಪ್ರಾರಂಭಿಸಲಾಗುತ್ತಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಪೋಷಕರು ತಮ್ಮ ಮಕ್ಕಳನ್ನು ತರಗತಿಗೆ ಸೇರಿಸಬೇಕು ಎಂದರು.

ಕೊಡಗು ಜಿಲ್ಲೆ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದಿದ್ದು, ಸೋಮವಾರಪೇಟೆ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ನೀಡುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರದೆ, ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್, ಉಪಾಧ್ಯಕ್ಷೆ ಜಲಾ ದಿನೇಶ್, ಅಶ್ವಿನಿ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಪ್ಪ, ಪೂರ್ವ ಪ್ರಾಥಮಿಕ ಶಾಲೆ ಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ಕೆ. ಲೋಕಾನಂದ, ಶಿಕ್ಷಕ ಹೇಮಂತ್‌ಕುಮಾರ್, ನಾಗೇಂದ್ರ, ಮುಖ್ಯ ಶಿಕ್ಷಕಿ ಶಾಂತಮ್ಮ, ಪ್ರಮುಖರಾದ ಕೆ.ಎಂ. ಲೋಕೇಶ್, ಬಿ.ಬಿ. ಸತೀಶ್, ಎಸ್.ಎಂ. ಡಿಸಿಲ್ವ, ಉಷಾ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಆಶಾ ಸೇರಿದಂತೆ ಇತರರು ಉಪಸ್ಥಿತರಿದ್ದರು.