ಕೂಡಿಗೆ, ಜೂ. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ೩೪ನೇ ವರ್ಷದ ಪ್ರತಿಷ್ಠಾಪನಾ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು.

ಶ್ರೀ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪ ದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಸೇರಿದಂತೆ ಇತ್ಯಾದಿ ಪೂಜಾ ಕೈಂಕರ್ಯಗಳನ್ನು ದೀಪು, ಸಜಿ ಪಣಿಕರ್ ತಂಡದವರು ನೆರವೇರಿಸಿದರು. ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಕೂಡಿಗೆ, ಕೂಡುಮಂಗಳೂರು, ಮದಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.