ಮಡಿಕೇರಿ, ಜೂ. ೨೨: ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದುಪಜೆ, ಪಿ.ಎಸ್. ಕಾರ್ಯಪ್ಪ, ಡಾ.ಎನ್.ಎ. ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿ, ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈಶಿಷ್ಟö್ಯತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ಎ.ಎಸ್. ಪೊನ್ನಣ್ಣ ಸಲಹೆ ನೀಡಿದರು.