ಸಿದ್ದಾಪುರ, ಜೂ. ೨೨: ಬಾಡಗ ಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಮರಿಯಾನೆಗಳು ಸೇರಿದಂತೆ ೨೨ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟಗಳಲ್ಲಿ ಸುತ್ತಾಡುತ್ತಿವೆ. ಇದರಿಂದಾಗಿ ಬೆಳೆಗಾರರಿಗೂ ಹಾಗೂ ಕಾರ್ಮಿಕರಿಗೆ ಸಮಸ್ಯೆ ಆಗಿದೆ. ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಲಗ್ಗೆಇಟ್ಟಿರುವ ಕಾಡಾನೆಗಳು ಕಾಫಿ ತೋಟಗಳಿಂದ ಕದಲುತ್ತಿಲ್ಲ. ಕಾಡಾನೆ ಕಾರ್ಯಾಚರಣೆ ಸಂದರ್ಭದಲ್ಲಿ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಲಗ್ಗೆ ಇಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟೇ ಶ್ರಮಪಟ್ಟರು ಕಾಫಿ ತೋಟದಿಂದ ಕಾಡಾನೆಗಳು ತೆರಳುತ್ತಿಲ್ಲ. ಕೆಲವು ಕಾಡಾನೆಗಳು ಕಾಫಿ ತೋಟಗಳಲ್ಲಿ ಮರಿ ಹಾಕಿದ್ದು, ಅಂತಹ ಆನೆ ಮರಿಗಳು ತಮ್ಮ ತಾಯಿಯೊಂದಿಗೆ ಕಾಫಿ ತೋಟದಲ್ಲಿ ಸುತ್ತಾಡುತ್ತಿವೆ. ಇದರಿಂದಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಸರಕಾರ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.