ಮಡಿಕೇರಿ, ಜೂ. ೨೨: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ ಮತ್ತು ಉಜ್ವಲ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕೆಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ. ಪಂಕಜಾಕ್ಷನ್ ಕರೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ತಾ.೨೪ ರವರೆಗೆ ಶಿಕ್ಷಕರಿಗಾಗಿ ನಡೆಯುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿ ಶಿಬಿರಗಳು ಬದಲಾವಣೆಗೆ ದಾರಿಯಾಗಿವೆ, ಶಿಸ್ತು ರೂಪಿಸುತ್ತವೆ. ಸಮಾಜಮುಖಿಯಾಗಿ ಬೆಳೆಯಲು ಸಹಕರಿಸುತ್ತವೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ನಗರಸಭೆ ಪೌರಾಯುಕ್ತ ವಿಜಯ್, ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ತರಬೇತಿ ಮುಖ್ಯ. ಒಬ್ಬ ವ್ಯಕ್ತಿ ಯಾವುದೇ ಕಾರ್ಯ ಮಾಡಬೇಕಾದರೂ ಅದಕ್ಕೆ ತರಬೇತಿಯ ಅಗತ್ಯವಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ತರಬೇತಿಯ ಅವಶ್ಯಕತೆ ಇದ್ದು, ಇದಕ್ಕೆ ಅಂತ್ಯ ಹಾಗೂ ಆರಂಭವೆನ್ನುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಶಿಕ್ಷಕರು ಶಿಲ್ಪಿಗಳಿಗೆ ಸಮಾನ, ವಿದ್ಯಾರ್ಥಿಗಳನ್ನು ತಿದ್ದಿ, ತೀಡಿ ಉತ್ತಮ ಮಾರ್ಗದರ್ಶನ ನೀಡಿದರೆ ನಮ್ಮ ದೇಶದ ಅತ್ಯಮೂಲ್ಯ ವ್ಯಕ್ತಿಗಳಾಗುತ್ತಾರೆ ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುಳಾ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಶಾಲೆಯಲ್ಲಿ ಪಾಠದ ಜೊತೆಗೆ ಶಿಸ್ತು, ದೃಢ ನಿರ್ಧಾರ, ಮುನ್ನುಗುವ ಸ್ವಭಾವವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಶಿಬಿರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮೂಲ ಉದ್ದೇಶ, ಧ್ಯೇಯಗಳು, ಧ್ವಜಾರೋಹಣ ಮತ್ತು ಪ್ರಥಮ ಚಿಕಿತ್ಸೆ, ಶಾರೀರಿಕ ವ್ಯಾಯಾಮ, ಕೌಶಲ್ಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ಸ್ ತರಬೇತಿ ಆಯುಕ್ಷೆ ಮೈಥಿಲಿ ರಾವ್, ಸಹಾಯಕ ಗೈಡ್ಸ್ ಆಯುಕ್ತೆ ಸುಲೋಚನ, ತರಬೇತಿ ನಾಯಕ ಶಿವಶಂಕರ್, ಗೈಡ್ಸ್ ವಿಭಾಗದ ಸಹ ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ, ಪ್ರಮುಖರಾದ ಕುಮಾರಸ್ವಾಮಿ, ಗಣೇಶ್, ಬೋಜಮ್ಮ ಮತ್ತಿತರರು ಉಪಸ್ಥಿತರಿದ್ದರು.
ಸ್ಕೌಟ್ಸ್ ತರಬೇತಿ ಆಯುಕ್ತ ರಂಜಿತ್ ಸ್ವಾಗತಿಸಿ, ಪೊನ್ನಂಪೇಟೆ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ. ವಾಮನ ನಿರೂಪಿಸಿ, ಸಹಾಯಕ ತರಬೇತಿ ಆಯುಕ್ತೆ ಆಲಿಮಾ ವಂದಿಸಿದರು.