ಮಡಿಕೇರಿ, ಜೂ. ೨೫: ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ತಾ.೨೬ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಾಗೃತಿ ಜಾಥಾ ನಡೆಯಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಜನರಲ್ ತಿಮ್ಮಯ್ಯ ವೃತ್ತದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾಗಾAಧಿ ವೃತ್ತ ಹಾಗೂ ಕಾಲೇಜು ರಸ್ತೆ ಮೂಲಕ ಜಾಗೃತಿ ಜಾಥಾ ಹೊರಟು ನಗರದ ಕಾವೇರಿ ಹಾಲ್ ತಲುಪಲಿದೆ. ಬಳಿಕ ಸಭಾ ಕಾರ್ಯಕ್ರಮವು ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.