ಕುಶಾಲನಗರ, ಜೂ. ೨೫: ರಾಜ್ಯದಲ್ಲಿ ಮಾರ್ಚ್ - ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೊಡಗು ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ಇದಕ್ಕೆ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿ-ಪೋಷಕ ವೃಂದ ಕಾರಣ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಹೇಳಿದರು

ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಶೈಕ್ಷಣಿಕ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಸ್ಥಾನ ಗಳಿಸುವಲ್ಲಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಶ್ರಮಿಸಬೇಕು ಎಂದು ಬಿಇಓ ಭಾಗ್ಯಮ್ಮ ಸಲಹೆ ನೀಡಿದರು.

ಜಿಲ್ಲಾ ಎಸ್.ಎಸ್.ಎಲ್.ಸಿ. ನೋಡಲ್ ಅಧಿಕಾರಿ ಮಹದೇವಸ್ವಾಮಿ ಮಾತನಾಡಿ, ಕಳೆದ ವರ್ಷದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಗುಣಾತ್ಮಕ ಫಲಿತಾಂಶ ಪಡೆಯಲು ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ಪರಿಶ್ರಮ ಕಾರಣ ಎಂದರು.

ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕಾಳನಾಯಕ್ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರ ನೀಡುವುದು ಸೇರಿದಂತೆ ಸ್ವಚ್ಛತೆ, ನೈರ್ಮಲ್ಯ ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಎಲ್ಲರೂ ಒಗ್ಗಟ್ಟಿನಿಂದ ಸೇರಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಸಾಧ್ಯ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಂ. ಹೇಮಂತ್, ಶಿಕ್ಷಣ ಇಲಾಖೆಯ ವಿವಿಧ ಶೈಕ್ಷಣಿಕ ಮಾಹಿತಿಗಳನ್ನು ನೀಡಿದರು.

ಶಾಲೆಯ ಉಪ ಪ್ರಾಂಶುಪಾಲ ವೈ.ಜೆ. ಪರಮೇಶ್ವರಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್ ಪಲ್ಲೇದ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಿ.ಎನ್. ಪುಷ್ಪ, ಎಂ.ವಿ. ಮಂಜೇಶ್, ಬಿ.ಆರ್.ಪಿ.,ಎಸ್.ಎಸ್. ಶಿವಕುಮಾರ್, ಇಸಿಓ ಶೇಖರ್ ಹಾಗೂ ತಾಲೂಕಿನ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಇದ್ದರು.

ಇದೇ ವೇಳೆಯಲ್ಲಿ ಇತ್ತೀಚೆಗೆ ನಿವೃತ್ತಗೊಂಡ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಅವರನ್ನು ಬಿಇಓ ಭಾಗ್ಯಮ್ಮ ಸನ್ಮಾನಿಸಿ, ಗೌರವಿಸಿದರು. ವಿದ್ಯಾರ್ಥಿನಿ ಪ್ರಗತಿ ಬಡಿಗೇರ್ ಗೀತೆ ಹಾಡಿದರು.