ಮುಳ್ಳೂರು, ಜೂ. ೨೫: ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣವನ್ನು ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯ ಅಧ್ಯಕ್ಷ ಎಚ್.ಆರ್. ಉದಯ್‌ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್, ಕಾರ್ಯದರ್ಶಿ ಸಂಪತ್, ರೋಟರಿ ಕ್ಲಬ್ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

ನಂತರ ಆಲೂರು-ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ರೋಟರಿ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ರೋಟರಿ ಸಂಸ್ಥೆಯ ಪದಗ್ರಹಣ ಅಧಿಕಾರಿ ಟಿ.ಕೆ. ರವಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಬಳಿಕ ಮಾತನಾಡಿ, ರೋಟರಿ ಸಂಸ್ಥೆಯ ಸದಸ್ಯರು ನಿಸ್ವಾರ್ಥವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ಮೂಲಕ ಸದಸ್ಯರು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದಾರೆ. ರೋಟರಿ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ಈ ಮೂಲಕ ವಾಗಿ ಸಮಾಜಮುಖಿ ಕಾರ್ಯವನ್ನು ಮಾಡುತ್ತಿದೆ ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯ ಅಭಿವೃದ್ಧಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಆಲೂರು-ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯ ೨೦೨೪-೨೫ನೇ ಸಾಲಿನ ನೂತನ ಅಧ್ಯಕ್ಷರಾಗಿ ಟಿ.ವಿ. ದಯಾನಂದ್, ಕಾರ್ಯದರ್ಶಿಯಾಗಿ ಹೆಚ್.ಇ. ಕಿರಣ್ ಆಯ್ಕೆಯಾದರು. ಈ ಸಂದರ್ಭದಲ್ಲಿ ೨೦೨೩-೨೪ನೇ ಸಾಲಿನ ರೋಟರಿ ಸಂಸ್ಥೆ ಅಧ್ಯಕ್ಷರಾಗಿದ್ದ ಉದಯ್‌ಕುಮಾರ್ ಅವರನ್ನು ೨೦೨೪-೨೫ನೇ ಸಾಲಿನ ಜೋನಲ್ ಲೆಫ್ಟಿನೆಂಟಾಗಿ ಆಯ್ಕೆ ಮಾಡಲಾಯಿತು. ಪದಗ್ರಹಣ ಸಮಾರಂಭದಲ್ಲಿ ರೋಟರಿ ಕ್ಲಬ್ ಪ್ರಮುಖರಾದ ಎಂ.ಡಿ. ಲಿಖಿತ್, ಡಾ. ಹರಿ ಎ. ಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಲೂರು-ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ರೋಟರಿ ಸದಸ್ಯರ ಕುಟುಂಬ ವರ್ಗದವರು ಹಾಜರಿದ್ದರು.