ಮಡಿಕೇರಿ, ಜೂ. ೨೬: ಜಿಲ್ಲೆಯಲ್ಲಿ ಒತ್ತುವರಿ ಮಾಡಿ ಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯ ಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್. ಭರತ್, ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯ ಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, ೨೦೧೮-೧೯ರಲ್ಲಿ ಮಹಾ ಮಳೆಯಿಂದ ಮನೆ ಕಳೆದುಕೊಂಡಿರುವ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಕಾರ್ಯದರ್ಶಿ ಎ.ಸಿ. ಸಾಬು, ಉಪಾಧ್ಯಕ್ಷ ಮಹದೇವ್, ಖಜಾಂಚಿ ಎನ್.ಡಿ. ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್. ಶಾಜಿ ರಮೇಶ್, ಕೆ.ಕೆ. ಹರಿದಾಸ್, ಪುಷ್ಪ, ಹೆಚ್.ಬಿ. ರಮೇಶ್, ಜಾನಕಿ, ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಲಕ್ಷö್ಮಣ್, ಆದಿವಾಸಿ ನಾಯಕರಾದ ರಘು, ಸುರೇಶ್, ಮುತ್ತ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಡಳಿತ ಮೂಲಕ ಸರಕಾರಕ್ಕೆ ಸಲ್ಲಿಸಿದರು.