ಮಡಿಕೇರಿ, ಜೂ. ೨೭ : ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದಲ್ಲಿ ನಿರ್ಮಾಣ ಮಾಡಲು ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರ ವಾಗಿದೆ. ಆ ನಿಟ್ಟಿನಲ್ಲಿ ಕೆಂಪೇಗೌಡ ಅವರ ಪ್ರತಿಮೆ ನಿರ್ಮಿಸುವಂತಾಗಲು ಜಾಗ ಗುರುತಿಸಿದಲ್ಲಿ, ವಿವಿಧ ಸಂಘಟನೆಗಳ ಜೊತೆಗೂಡಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗುವುದಾಗಿ ಶಾಸಕರು ಹೇಳಿದರು.

ಕೆಂಪೇಗೌಡರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳು ವಂತಾಗಬೇಕು ಎಂದು ಶಾಸಕರು ಸಲಹೆಯಿತ್ತರು.

ಮುಂದಿನ ದಿನಗಳಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕೆಂಪೇಗೌಡ ಅವರ ಜಯಂತಿಯನ್ನು ಮತ್ತಷ್ಟು ಅದ್ದೂರಿಯಾಗಿ ಆಚರಿಸೋಣ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ ಕುಯ್ಯಮುಡಿ ಅಶ್ವಿನಿಕುಮಾರ್ ಮಾತನಾಡಿ ಆದರ್ಶ ಆಡಳಿತಗಾರ, ದೂರದೃಷ್ಟಿಯ ಚಿಂತಕ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ‘ಕೆಂಪೇಗೌಡರ ಅಧ್ಯಯನ ಕೇಂದ್ರ’ ಆರಂಭಿಸಬೇಕು ಸಲಹೆಯಿತ್ತರು.

ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜಾಗ ಗುರುತಿಸಿ : ಡಾ. ಮಂತರ್ ಗೌಡ

(ಮೊದಲ ಪುಟದಿಂದ) ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಆಡಳಿತದ ಕೆಲಸಗಳು ಇಂದಿಗೂ ಸಹ ಸಾರ್ವಕಾಲಿಕವಾಗಿದೆ ಎಂದರು.

ಸ್ವಾತಂತ್ರö್ಯ ಪೂರ್ವದಲ್ಲಿ ಎಷ್ಟು ಕೆರೆಗಳಿದ್ದವು, ಈಗ ಎಷ್ಟು ಕೆರೆಗಳಿವೆ ಎಂಬ ಬಗ್ಗೆ ಅವಲೋಕನ ಮಾಡಬೇಕಿದೆ. ಆದರ್ಶ ಆಡಳಿತಗಾರ ಕೆಂಪೇಗೌಡ ಅವರು ಜನಸ್ನೇಹಿ ಆಡಳಿತ ನೀಡಲು ಶ್ರಮಿಸಿದ್ದಾರೆ ಎಂದರು. ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎನ್. ಚಂಗಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿದರು.

ಚಿತ್ರಕಲಾ ಶಿಕ್ಷಕ ಬಿ.ಆರ್.ಸತೀಶ್ ಅವರು ಸಭಾ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಚಿತ್ರವನ್ನು ಬಿಡಿಸುವ ಮೂಲಕ ಗಮನ ಸೆಳೆದರು.

ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವ್ಯಾಪ್ತಿಯಲ್ಲಿ ಕೆಂಪೇಗೌಡರ ಜೀವನ ಚರಿತ್ರೆ ಕುರಿತು ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

ಮೈಸೂರಿನ ರಾಘವೇಂದ್ರ ಪ್ರಸಾದ್ ತಂಡದವರು ಕೆಂಪೇಗೌಡರ ಕುರಿತು ಹಾಡು ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಸ್ವಾಗತಿಸಿದರು. ಶಿಕ್ಷಕ ಕುಮಾರ್ ನಿರೂಪಿಸಿ, ಮಣಜೂರು ಮಂಜುನಾಥ್ ವಂದಿಸಿದರು.