ಕುಶಾಲನಗರ, ಜೂ. ೨೭ : ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಕೇಂದ್ರಗಳಿಗೆ ಸೀಮಿತವಾಗಿ ಮೂರನೇ ವಿಧಾನ ಸಭಾ ಕ್ಷೇತ್ರ ದ ಅಗತ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಕುಶಾಲನಗರ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದ ಸಂದರ್ಭ ಈ ವಿಷಯ ಪ್ರಸ್ತಾವನೆ ಮಾಡಿದರು.
ಎರಡು ತಾಲೂಕುಗಳಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು ಎಲ್ಲಾ ಇಲಾಖೆಗಳಲ್ಲಿಯೂ ಒತ್ತಡದ ಕೆಲಸ ಕಾರ್ಯಗಳು ನಡೆಯುತ್ತಿವೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಸ್ಥಳೀಯ ಜನರ ಒತ್ತಡ ಜೊತೆಗೆ ನೆರೆಯ ಜಿಲ್ಲೆಗಳ ವ್ಯಾಪಾರ ವಹಿವಾಟು ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿದೆ. ತಾಲೂಕು ಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಅಲ್ಲದೆ ಎಲ್ಲಾ ಇಲಾಖೆಗಳನ್ನು ಮೇಲ್ದರ್ಜೆಗೆ ಏರಿಸಬೇಕಾಗುತ್ತದೆ . ನೂತನ ಹಾಗೂ ಹಳೆಯ ತಾಲೂಕುಗಳ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ಸರ್ಕಾರ ಬಿಡುಗಡೆ ಮಾಡಬೇಕಾದಲ್ಲಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಆದಲ್ಲಿ ಒಳಿತಾಗುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ ಸತೀಶ್ ಕುಮಾರ್ ಇದ್ದರು.
-ಚಂದ್ರಮೋಹನ್