ಶನಿವಾರಸಂತೆ, ಜೂ. ೨೭: ಸೋಮವಾರಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಡ್ಲಿಪೇಟೆ ವಲಯದ ಕಿತ್ತೂರು ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ವೀರೇಶ್ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೆ.ಪಿ.ನಾಗರಾಜ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಈ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಳ್ಳಿ-ಹಳ್ಳಿಗಳಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಣೆ ಮಾಡಿ ಪ್ರೋತ್ಸಾಹಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ರಾಜು, ಸೇವಾ ಪ್ರತಿನಿಧಿ ಭಾಗ್ಯ, ರೇಖಾ, ಕಿತ್ತೂರು ಒಕ್ಕೂಟದ ಅಧ್ಯಕ್ಷ ನಟರಾಜ್, ಸರ್ಕಾರಿ ಶಾಲಾ ಮುಖ್ಯ ಶಿಕ್ಷಕಿ ರೇಖಾ, ಸಹ ಶಿಕ್ಷಕಿ ವಿಶಾಲಾಕ್ಷಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗಿರಿಜಾ, ಸೌಮ್ಯಾ, ಅಂಗನವಾಡಿ ಕಾರ್ಯಕರ್ತೆ ಗಿರಿಜಾ, ಮುಖಂಡ ಪ್ರಸಾದ್, ಇತರ ಗ್ರಾಮದ ಪ್ರಮುಖರು ಹಾಜರಿದ್ದರು.